ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವೀಗ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿ ಆದೇಶಿಸಿದೆ. ರಾಜ್ಯ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆಯ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಮಂಗಳವಾರ ಸಹಿ ಹಾಕಿದ್ದರು. ಈ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಗೋಹತ್ಯೆ ನಿಷೇಧ ಕಾಯ್ದೆ ಅಧಿಕೃತ ಆದೇಶ ಹೊರಡಿಸಿ ಪ್ರಕಟಿಸಿದ್ದಾರೆ.
“ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020” ಯಡಿಯೂರಪ್ಪ ಸರ್ಕಾರದ ಮಹತ್ವಾಕಾಂಕ್ಷೆ ಕಾಯ್ದೆ. ಈ ಕಾಯ್ದೆಯ ಮೂಲ ಉದ್ದೇಶ ರಾಜ್ಯದಲ್ಲಿ ಗೋಹತ್ಯಾ ನಿಷೇಧ. ಈ ಕಾರಣಕ್ಕೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಹೀಗಿದ್ದರೂ ಈ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಸರ್ಕಾರ ಅಂಗೀಕಾರ ಪಡೆದುಕೊಂಡಿತ್ತು.
ವಿಧಾನಸಭೆಯಲ್ಲಿ ಅನುಮೋದನೆ ಸಿಕ್ಕರೂ ಬಿಜೆಪಿ ಸರ್ಕಾರಕ್ಕೆ ವಿಧಾನ ಪರಿಷತ್ನಲ್ಲಿ ಬಹುಮತ ಇಲ್ಲದ ಕಾರಣ ಅಂಗೀಕಾರ ಸಿಕ್ಕಿರಲಿಲ್ಲ. ಈ ಕಾಯ್ದೆ ವಿಚಾರವಾಗಿಯೇ ಪರಿಷತ್ನಲ್ಲಿ ದೊಡ್ಡ ಮಟ್ಟದಲ್ಲಿ ನಡೆದ ಗಲಾಟೆಯೂ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದಾದ ನಂತರ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020” ಕಾಯ್ದೆಯನ್ನು ಕೊನೆಗೂ ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ಮಾಡಲು ನಿರ್ಧರಿಸಿತ್ತು. ಹಾಗಾಗಿಯೇ ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಟ್ಟಿತ್ತು. ಅದಕ್ಕೀಗ ರಾಜ್ಯಪಾಲರು ಸಹಿ ಹಾಕಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಕಾಯ್ದೆ ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಕಾಯ್ದೆ ಪ್ರಕಾರ ಇಂದಿನಿಂದಲೇ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಹತ್ಯೆಯ ನಂತರ ಜಾನುವಾರು ಮಾರಾಟ ಮತ್ತು ಖರೀದಿಗೂ ಅವಕಾಶ ಇಲ್ಲ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಇನ್ನು, ಜಾನುವಾರು ಹತ್ಯೆಗಾಗಿ ಮಾರಾಟ ಮಾಡಬಾರದು. ಒಂದು ವೇಳೆ ಹೀಗಾದಲ್ಲಿ ಅಂತಹ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಹಾಗೆಯೇ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಕಟ್ಟಬೇಕು. ಕೃಷಿ ಮತ್ತು ಪಶು ಸಂಗೋಪನೆಗೆ ಜಾನುವಾರು ಸಾಗಿಸಬಹುದು ಎಂದು ಹೇಳಲಾಗಿದೆ.
1964 ರ ಕಾಯ್ದೆಯನ್ವಯ 12 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಹಸು, ಎಮ್ಮೆ, ಕೋಣಗಳನ್ನು ಮಾಂಸಕ್ಕಾಗಿ ವಧಿಸಲು ಅವಕಾಶವಿತ್ತು. ಈಗ ತಿದ್ದುಪಡಿ ಮಸೂದೆಯ ಪ್ರಕಾರ, ಹಸು ಮತ್ತು ಎತ್ತುಗಳನ್ನು ಜೀವಿತಾವಧಿಯವರೆಗೂ ವಧಿಸಲು ನಿರ್ಬಂಧ ಹೇರಲಾಗಿದೆ. ಜಾನುವಾರು ಹತ್ಯೆಗೈದರೆ ಶಿಕ್ಷೆ ಹಾಗೂ ದಂಡ ವಿಧಿಸುವ ಅಧಿಕಾರವನ್ನು ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಪೊಲೀಸರಿಗೆ ನೀಡಲಾಗಿದೆ.
ಡಿಸೆಂಬರ್ 28 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿತ್ತು. “ಮಸೂದೆಯು ಕಾನೂನಾಗಿ ಜಾರಿಯಾದರೂ ಎಮ್ಮೆ, ಕೋಣದ ಮಾಂಸ ಮಾರಾಟಕ್ಕೆ ಯಾವುದೇ ನಿಷೇಧ ಇರುವುದಿಲ್ಲ. ಅಲ್ಲದೆ ಚರ್ಮೋದ್ಯಮಕ್ಕೂ ಈ ಕಾಯ್ದೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂಬ ಬಗ್ಗೆಯೂ ಚರ್ಚಿಸಲಾಗಿತ್ತು.