ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಿಂದಾಗ ಉಂಟಾದ ನಷ್ಟವನ್ನು ನಿಭಾಯಿಸಿ ಜನರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಕುರಿತು ಸರಣಿ ಟ್ವೀಟ್ ಮಾಡಿದ ಕುಮಾರಸ್ವಾಮಿ, ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕರೋನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟುಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.