ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಕಾಯ್ದೆಗಳಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿಯ ಬಗ್ಗೆ ವಿರೋಧ ಪಕ್ಷದ ರಾಜಕೀಯ ನಾಯಕರು ರೈತರನ್ನು ಹಾದಿ ತಪ್ಪಿಸುವ ಕೆಲಸ ಮಾಡಿಸುತ್ತಿದ್ದಾರೆ. ಆದರೆ ಶೇಕಡಾ 99% ರೈತರು ಸ್ವಾಗತಿಸಿದ್ದಾರೆ, ಆದರೆ ಕೆಲವು ಸ್ವಾರ್ಥಿಗಳು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ದ ಇದ್ದಾರೆಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಶ್ರುಕ್ರವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮದಿನದ ಅಂಗವಾಗಿ ಯಶವಂತಪುರದ ಎಪಿಎಂಸಿ ಘಟಕದಲ್ಲಿ ಕಿಸಾನ್ ಸಮ್ಮಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೋದಿ ಸರ್ಕಾರ ಜಾರಿಗೆ ತಂದ ಕೃಷಿ ಕಾನೂನುಗಳ ಬಗ್ಗೆ ನಮ್ಮ ವಿರೋಧಿಗಳು ರೈತರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿದ್ದಾರೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ತರುವ ಮೂಲಕ ರೈತ ಬೆಳೆದ ಉತ್ಪನ್ನವನ್ನು ಎಲ್ಲಿ ಬೇಕಾದರು ಮಾರ ಬಹುದು. ಇದನ್ನು ಶೇಕಡಾ 99 ರೈತರು ಸ್ವಾಗತಿಸಿದ್ದಾರೆಂದು ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚುವುದಿಲ್ಲ ಬದಲಾಗಿ ಮೂಲ ಸೌಕರ್ಯ ಅಭಿವೃದ್ಧಿ ಪಡಿಸಲು 250 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಎಂದು ಸಹಕಾರ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ರೈತರ ಅಭಿವೃದ್ಧಿಯ ದೃಷ್ಟಿಯಿಂದ ಮತ್ತು ಸ್ವಾಭಿಮಾನದಿಂದ ಬದುಕಲು ಮತ್ತು ರೈತ ದಲ್ಲಾಳಿಗಳಿಂದ ಮೋಸ ಹೋಗದಿರಲು ಕೃಷಿ ಕಾಯ್ದೆಗಳನ್ನು ತಿದ್ದುಪಡಿ ಮಾಡಲಾಗಿದೆ. ಇದು ರೈತರ ಅಭಿವೃದ್ಧಿಗೆ ಸಹಕಾರಿ ಎಂದು ಕೇಂದ್ರ ರಾಸಾಯನಿಕ ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.

ರಾಜ್ಯದ ಗ್ರಾಮೀಣ ಪ್ರದೇಶಗಳಿಗೆ ಪ್ರವಾಸ ಕೈಗೊಂಡು ಕೃಷಿ ಭೂಮಿಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಾಗುತ್ತಿದೆ. ಕೃಷಿ ಯೋಜನೆಗಳ ಸದುಪಯೋಗದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ಇದೇ ವೇಳೆ ನಿಷ್ಠೆಯಿಂದ ಕೆಲಸ ನಿರ್ವಹಿಸಿದ ರೈತರನ್ನು, ಆಟೋ ಚಾಲಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ. ಗೋಪಾಲಯ್ಯ, ಸಚಿವ ಬಿಸಿ ಪಾಟೀಲ್, ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಸೇರಿದಂತೆ ಹಲವು ಸಚಿವರುಗಳು ಉಪಸ್ಥಿತರಿದ್ದರು.






