ಕೇಂದ್ರ ಸರ್ಕಾರ ಪ್ರಕಟಿಸಿರುವ ಪೌರತ್ವ ತಿದ್ದುಪಡಿ ಕಾನೂನು ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿಗಳ ವಿರುದ್ಧ ಪ್ರತಿಭಟನೆಗಳು ಕೇವಲ ದೆಹಲಿ, ಪಶ್ಚಿಮ ಬಂಗಾಳ, ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಷ್ಟೇ ಅಲ್ಲ ಇಡೀ ವಿಶ್ವವನ್ನೇ ವ್ಯಾಪಿಸಿವೆ. ವಿದೇಶಗಳಲ್ಲಿ ನೆಲೆಸಿರುವ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಮತ್ತು ಭಾರತೀಯ ಮೂಲದ ಜನರು ಬೀದಿಗಿಳಿದು ಈ ಎರಡು ಯೋಜನೆಗಳ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.
ಇಷ್ಟೇ ಅಲ್ಲ, ಭಾರತದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಪೊಲೀಸರು ನಡೆಸುತ್ತಿರುವ ಹಲ್ಲೆ, ದೌರ್ಜನ್ಯ ಮತ್ತು ಗೋಲಿಬಾರ್ ಪ್ರಕರಣಗಳನ್ನು ವಿದೇಶದ ಭಾರತೀಯರು ತೀವ್ರವಾಗಿ ಖಂಡಿಸುತ್ತಿದ್ದಾರೆ.
ಆಕ್ಸ್ ಫರ್ಡ್, ಸೈನ್ಸಸ್ ಪೊ (ಪ್ಯಾರೀಸ್), ಹಾರ್ವರ್ಡ್, ಕೇಂಬ್ರಿಡ್ಜ್, ಕೊಲಂಬಿಯಾ, ಯೂನಿವರ್ಸಿಟಿ ಆಫ್ ಮೆಸಾಚುಸೆಟ್ಸ್ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ಲಂಡನ್, ನ್ಯೂಯಾರ್ಕ್, ಪ್ಯಾರೀಸ್, ವಾಷಿಂಗ್ಟನ್ ಡಿಸಿ, ಬರ್ಲಿನ್, ಜೆನೇವಾ, ಬಾರ್ಸಿಲೋನಾ, ಸ್ಯಾನ್ ಫ್ರಾನ್ಸಿಸ್ಕೋ, ಟೋಕಿಯೋ ಮತ್ತು ಮೆಲ್ಬೋರ್ನ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ವಾಸಿಸುತ್ತಿರುವ ಭಾರತೀಯರು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕುವ ಮೂಲಕ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಾಥ್ ನೀಡಿದ್ದಾರೆ.
CAA ಮತ್ತು NRC ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕು, ಇವುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಬಾಯಿ ಮುಚ್ಚಿಸಲು ಮತ್ತು ಅವರನ್ನು ಹತ್ತಿಕ್ಕಲು ನಿಯೋಜನೆ ಮಾಡುತ್ತಿರುವ ಪೊಲೀಸ್ ಪಡೆಗಳನ್ನು ವಾಪಸ್ ಪಡೆಯಬೇಕು, ಪ್ರತಿಭಟನೆ ನಡೆಸಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಹೂಡಲಾಗಿರುವ ಎಫ್ಐಆರ್ ಗಳನ್ನು ರದ್ದು ಮಾಡಬೇಕು, ಸ್ಥಗಿತಗೊಳಿಸಲಾಗಿರುವ ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳನ್ನು ಕೂಡಲೇ ಪುನಾರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಹಲವು ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನೆ ನಡೆಸಿರುವ ವಿದ್ಯಾರ್ಥಿಗಳು, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ, ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ, ಗುವಾಹಟಿ ವಿಶ್ವವಿದ್ಯಾಲಯ, ದೆಹಲಿ ವಿಶ್ವವಿದ್ಯಾಲಯ, ಕಾಟನ್ ವಿಶ್ವವಿದ್ಯಾಲಯ ಮತ್ತು ದೇಶದ ಇತರೆ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿದ್ದಾರೆ. ಕಾನೂನು ಬಾಹಿರವಾಗಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗುವ ಕೃತ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು. ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಮಾನುಷವಾಗಿ ವರ್ತಿಸುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಟೊರಾಂಟೋ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಮೂಹ ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಪೊಲೀಸರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯವಾಗಿದೆ. ನಾವು ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಹೇಳಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಭಟನೆ ನಡೆಸಿರುವ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ತಜ್ಞರು ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ, ಖಂಡನಾ ಹೇಳಿಕೆಗಳನ್ನೊಳಗೊಂಡ ಘೋಷಣಾ ಪತ್ರಕ್ಕೆ ಸಹಿ ಹಾಕಿರುವ ವಿದ್ಯಾರ್ಥಿಗಳು ನಾವು ಎರಡನೇ ದರ್ಜೆಯ ಪೌರತ್ವ ನೀಡುವುದನ್ನು ವಿರೋಧಿಸುತ್ತೇವೆ. ಈ ಕಾನೂನು ತರುವುದರ ಹಿಂದೆ ಬಹುಸಂಖ್ಯಾತರ ಕೈವಾಡವಿದೆ. ಪ್ರಜಾಪ್ರಭುತ್ವದಲ್ಲಿ ಮೂಲಭೂತ ಹಕ್ಕುಗಳಿಗಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ನಾವು ಬೆಂಬಲವಾಗಿ ನಿಲ್ಲುತ್ತೇವೆ ಮತ್ತು ವಿಶ್ವವಿದ್ಯಾಲಯಗಳ ಆವರಣಗಳೊಳಗೆ ನಿಯೋಜನೆ ಮಾಡಿರುವ ಪೊಲೀಸ್ ಪಡೆಗಳನ್ನು ಕೂಡಲೇ ಹೊರ ಹಾಕಬೇಕೆಂದು ಆಗ್ರಹಿಸಿದ್ದಾರೆ.
ಕೃಪೆ: ʼದಿ ವೈರ್ʼ