2020-21ರ ಶೈಕ್ಷಣಿಕ ವರ್ಷದ ಸರ್ಕಾರಿ ಶಾಲೆಗಳ ಮಕ್ಕಳ ದಾಖಲಾತಿಯಲ್ಲಿ ಕಳೆದ 14 ವರ್ಷಗಳಲ್ಲಿ ಅತಿ ದೊಡ್ಡ ಏರಿಕೆ ಕಂಡಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತಿಳಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಭಾನುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಈ ವರ್ಷ 90,000 ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
“ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಯು ಕಳೆದ 14 ವರ್ಷಗಳಲ್ಲಿ ಅತಿದೊಡ್ಡ ಹೆಚ್ಚಳವನ್ನು ಕಂಡಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ, ಆರ್ಥಿಕವಾಗಿ ದುರ್ಬಲ ವರ್ಗದ ಕುಟುಂಬಗಳು ಸರ್ಕಾರಿ ಶಾಲೆಗಳತ್ತ ಮುಖ ಮಾಡಿವೆ. ಇದು ಆಶಾದಾಯಕವಾಗಿದ್ದು, ಇದು ನಮ್ಮ ಭರವಸೆಯನ್ನು ಹೆಚ್ಚಿಸಿದೆ” ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 41.26 ಲಕ್ಷಕ್ಕೆ ಹೋಲಿಸಿದರೆ ಈ ವರ್ಷ ಸರ್ಕಾರಿ ಶಾಲೆಗಳಲ್ಲಿ ಒಟ್ಟು ಮಕ್ಕಳ ಸಂಖ್ಯೆ 42.16 ಲಕ್ಷ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡು ಬರುತ್ತಿದ್ದು, ಈ ಋಣಾತ್ಮಕ ಬೆಳವಣಿಗೆಗೆ ಈ ವರ್ಷದ ದಾಖಲಾತಿ ತಡೆ ನೀಡಿದೆ.

ಏತನ್ಮಧ್ಯೆ, ಕನ್ನಡ ಭಾಷೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಎಲ್ಲಾ ಹಂತದಲ್ಲೂ ಕೆಲಸ ಮಾಡುತ್ತಿದೆ ಎಂದು ಸಚಿವರು ಹೇಳಿದ್ದಾರೆ.
“ಸಾಂಕ್ರಾಮಿಕ ರೋಗಕ್ಕೆ ಕನ್ನಡದ ಬಗ್ಗೆ ರಾಜ್ಯ ಸರ್ಕಾರದ ಬದ್ಧತೆಯನ್ನು ಕಸಿಯಲು ಸಾಧ್ಯವಾಗಿಲ್ಲ. ಕಡ್ಡಾಯ ಕನ್ನಡ ಕಲಿಕೆ ಕಾಯ್ದೆ ಯನ್ನು ಇತರ ಮಂಡಳಿಗಳಿಗೆ ಸಂಬಂಧಿಸಿದ ಖಾಸಗಿ ಶಾಲೆಗಳು ಸೇರಿದಂತೆ ಎಲ್ಲಾ ಶಾಲೆಗಳಲ್ಲಿ ಜಾರಿಗೆ ತರಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ” ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಎರಡನ್ನೂ ನೀಡುವ ದ್ವಿಭಾಷಾ ಶಾಲೆಗಳನ್ನು ಸರ್ಕಾರ ಪ್ರಾರಂಭಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಿಯು ಕೋರ್ಸ್‌ಗಳ NCERT ಪಠ್ಯಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸಲಾಗುವುದು. ಇದರಿಂದ ನಮ್ಮ ಮಕ್ಕಳು ಎದುರಿಸುತ್ತಿರುವ ಜಾಗತಿಕ ಸವಾಲುಗಳಿಗೆ ಪರಿಹಾರವನ್ನು ಕಂಡುಕೊಳ್ಳುವುದು ಸಾಧ್ಯವಾಗುತ್ತದೆ” ಎಂದು ಸಚಿವರು ಹೇಳಿದ್ದಾರೆ.