ಅಯೋಧ್ಯೆಯ ಭೂವಿವಾದ ತಾರ್ಕಿಕ ಅಂತ್ಯ ಕಂಡ ಬಳಿಕ ಈಗ ಬಾಬ್ರಿ ಮಸೀದಿ ಧ್ವಂಸಗೊಳಿಸುವುದರ ಹಿಂದಿದ್ದ ಷಡ್ಯಂತ್ರದ ಬಗ್ಗೆ, ಅದರಲ್ಲೂ ಮಾಜಿ ಉಪ ಪ್ರಧಾನಿ ಲಾಲಕೃಷ್ಣ ಅಡ್ವಾಣಿ ಸೇರಿದಂತೆ 32 ಮಂದಿ ಆರೋಪಿಗಳ ಪಾತ್ರ ಏನಿತ್ತು? ಅವರು ದೋಷಿಗಳಾ ಅಥವಾ ಇಲ್ಲವಾ ಎಂಬ ಬಗ್ಗೆ ಇಂದು ತೀರ್ಪು ಪ್ರಕಟಗೊಳ್ಳಲಿದೆ.
ಲಕ್ನೋದ ಸಿಬಿಐನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ. ಯಾದವ್ ಅವರ ನೇತೃತ್ವದ ನ್ಯಾಯಪೀಠವು 27 ವರ್ಷಗಳ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ. ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬೀಳಲು ಕ್ಷಣಗಣನೆ ಆರಂಭವಾಗಿದೆ. ತೀರ್ಪು ಪ್ರಕಟದ ಹಿನ್ನಲೆಯಲ್ಲಿ ಅಯೋಧ್ಯೆ, ಲಕ್ನೋ ಸೇರಿದಂತೆ ಆಯಕಟ್ಟಿನ ಜಾಗಗಳಲ್ಲಿ ಭಾರೀ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಭದ್ರತೆ ದೃಷ್ಟಿಯಿಂದ ತೀರ್ಪು ಪ್ರಕಟಿಸುವ ಜಾಗವನ್ನು ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯದ ಕಟ್ಟಡದಿಂದ ಲಕ್ನೋದ ಹಳೆಯ ನ್ಯಾಯಾಲಯ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಿರುವಂತೆ ನಿರ್ದೇಶಿಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿಗಳೆಂದರೆ ಮಾಜಿ ಉಪ ಪ್ರಧಾನಿ ಲಾಲಕೃಷ್ಣ ಅಡ್ವಾಣಿ, ಕೇಂದ್ರದ ಮಾಜಿ ಸಚಿವ ಮುರಳಿ ಮನೋಹರ ಜೋಷಿ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನದ ಹಾಲಿ ರಾಜ್ಯಪಾಲ ಕಲ್ಯಾಣ್ ಸಿಂಗ್, ಶ್ರೀರಾಮಭೂಮಿ ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಬಿಜೆಪಿ ನಾಯಕ ವಿನಯ್ ಕಟಿಯಾರ್, ಆರ್ ಎಸ್ ಎಸ್ ನಾಯಕ ಸತೀಶ್ ಪ್ರಧಾನ್, ಸಾದ್ವಿ ರಿತಂಬರಾ, ಕುಮಾರ್ ಪಾಂಡೆ.
ಇವರೆಲ್ಲರಿಗೂ ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಲಯದಲ್ಲಿ ಹಾಜರಿರುವಂತೆ ಸೂಚಿಸಲಾಗಿದ್ದರೂ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ ಜೋಷಿ, ನೃತ್ಯ ಗೋಪಾಲ್ ದಾಸ್, ಉಮಾ ಭಾರತಿ, ಸತೀಶ್ ಪ್ರಧಾನ್ ಹಾಜರಿರುವುದಿಲ್ಲ ಎಂಬುದು ಖಚಿತವಾಗಿದೆ. ಇವರುಗಳು ಲಕ್ನೋ ತಲುಪಿಲ್ಲ. ಈ ಪೈಕಿ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ ಜೋಷಿ ಮತ್ತು ನೃತ್ಯ ಗೋಪಾಲ್ ದಾಸ್ 80 ವರ್ಷಕ್ಕೂ ಹೆಚ್ಚಿನ ವಯಸ್ಸಿನವರಾಗಿರುವ ಹಿನ್ನಲೆಯಲ್ಲಿ ವಯಸ್ಸಿನ ಕಾರಣಕ್ಕೆ ನ್ಯಾಯಾಲಯಕ್ಕೆ ಬರುವುದಿಲ್ಲ. ಉಮಾ ಭಾರತಿ ಮತ್ತು ಸತೀಶ್ ಪ್ರಧಾನ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಬ್ಬರೂ ಚಿಕಿತ್ಸೆ ಪಡೆಯುತ್ತಿರುವುದರಿಂದ ಅವರು ಕೂಡ ಭಾಗವಹಿಸುವುದಿಲ್ಲ. ಇಡೀ ಪ್ರಕರಣದಲ್ಲಿ ಅತ್ಯಂತ ಕಿರಿಯ ವಯಸ್ಸಿನವರೆಂದರೆ ಪವನ್ ಕುಮಾರ್ ಪಾಂಡೆ (50 ವರ್ಷ). ಅವರು ನ್ಯಾಯಾಲಯದಲ್ಲಿ ಹಾಜರಿರುತ್ತಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಇತ್ತು. ಮೊಘಲ್ ಕಾಲದಲ್ಲಿ ರಾಮ ಮಂದಿರವನ್ನು ಕೆಡವಿ ಬಾಬ್ರಿ ಮಸೀದಿ ಕಟ್ಟಲಾಗಿದೆ ಎಂದು ಆರೋಪಿಸಿ 1984ರಲ್ಲಿ ವಿಶ್ವ ಹಿಂದು ಪರಿಷತ್ ಆಂದೋಲನ ಶುರುಮಾಡಿತು. ಜೊತೆಗೆ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲನ್ನು ಏರಿತು. ಆದರೆ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ 1992ರ ಡಿಸೆಂಬರ್ 6ರಂದು ‘ಕರಸೇವಕರೆಂಬ’ ಹಿಂದು ಕಾರ್ಯಕರ್ತರು ಬಾಬ್ರಿ ಮಸೀದಿಯನ್ನು ದ್ವಂಸ ಮಾಡಿದರು. ಬಾಬ್ರಿ ಮಸೀದಿ ಧ್ವಂಸದ ವಿರುದ್ಧ ಹೊಸ ದೂರು ದಾಖಲಾಯಿತು.
ಸೆಷನ್ ಕೋರ್ಟಿನಿಂದ ಸುಪ್ರೀಂ ಕೋರ್ಟ್ ವರೆಗೂ ಪ್ರಕರಣ ನಡೆಯಿತಾದರೂ ಇತ್ಯರ್ಥ ಆಗಿರಲಿಲ್ಲ.
2017ರ ಏಪ್ರಿಲ್ 19ರಂದು ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಎರಡು ವರ್ಷದೊಳಗೆ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿತು. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಿಬಿಐ ವಿಶೇಷ ನ್ಯಾಯಾಲಯವು ತ್ವರಿತವಾಗಿ ವಿಚಾರಣೆ ನಡೆಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಒಟ್ಟು 351 ಜನ ಸಾಕ್ಷಿಗಳು ಹಾಗೂ ಸುಮಾರು 600 ಸಾಕ್ಷ್ಯಚಿತ್ರಗಳ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಇವೆಲ್ಲವೂ 1992ರ ಡಿಸೆಂಬರ್ 6ರಂದು ಕರಸೇವಕರು ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ್ದರು ಎಂಬ ಬಗೆಗಿನ ಸಾಕ್ಷ್ಯಾಧಾರಗಳಾಗಿವೆ. ಇದೇ ಸೆಪ್ಟೆಂಬರ್ 1ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಾದ-ಪ್ರತಿವಾದ ಮುಕ್ತಾಯಗೊಂಡಿತ್ತು. ಸೆಪ್ಟೆಂಬರ್ 16ರಂದು ನ್ಯಾಯಾಧೀಶರಾದ ಎಸ್.ಕೆ. ಯಾದವ್ ಸೆಪ್ಟೆಂಬರ್ 30ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿದ್ದರು. ಈಗ ಆ ತೀರ್ಪಿನ ಬಗ್ಗೆ ಕುತೂಹಲ ಮೂಡಿದೆ. ತೀರ್ಪು ಪ್ರಕಟದ ಹಿನ್ನೆಲೆಯಲ್ಲಿ ಅಯೋಧ್ಯೆಯೂ ಸೇರಿದಂತೆ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.