ಕರೋನಾ ಸೇವೆಯಲ್ಲಿ ತೊಡಗಿರುವ ವೈದ್ಯರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಸರಿಯಾದ ಸಮಯಕ್ಕೆ ವೇತನ ನೀಡಲು ಸೂಚಿಸಿರುವ ಆದೇಶವನ್ನು ಪಾಲಿಸಲು ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ ಹಾಗೂ ತ್ರಿಪುರ ರಾಜ್ಯಗಳು ವಿಫಲವಾಗಿವೆ ಎಂದು ಕೇಂದ್ರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕೋವಿಡ್ -19 ಕರ್ತವ್ಯದಲ್ಲಿ ನಿರತರಾಗಿರುವ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ವೇತನವನ್ನು ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಲು ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಸರ್ವೋಚ್ಛ ನ್ಯಾಯಾಲಯ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಕೋವಿಡ್ ಕರ್ತವ್ಯ ನಿರ್ವಹಿಸುವ ಆರೋಗ್ಯ ಕಾರ್ಯಕರ್ತರಿಗೆ ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ರಜೆಯೆಂದು ಪರಿಗಣಿಸುವಂತಿಲ್ಲ ಎಂದು ಹೇಳಿರುವ ಸುಪ್ರೀಂ, ಕಡ್ಡಾಯ ಕ್ವಾರಂಟೈನ್ ಅವಧಿಯಲ್ಲಿ ವೇತನ ಕಡಿತಗೊಳಿಸಿದ ಕುರಿತು ಸ್ಪಷ್ಟನೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹೇಳಿದೆ.
ಕೇಂದ್ರ ಸರ್ಕಾರ ನೀಡಿರುವ ಆದೇಶಗಳನ್ನು ಹಾಗೂ ನಿರ್ದೇಶನಗಳನ್ನು ರಾಜ್ಯ ಸರ್ಕಾರ ಪಾಲಿಸದಿದ್ದರೆ ನೀವು ಅಸಹಾಯಕರಲ್ಲ. ವಿಪತ್ತು ನಿರ್ವಹಣಾ ಕಾಯ್ದೆಯಡಿ ನಿಮ್ಮ ಬಳಿ ಅಧಿಕಾರಗಳಿವೆ. ನೀವು ಕ್ರಮ ಕೈಗೊಳ್ಳಬಹುದು ಎಂದು ಕೇಂದ್ರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಅಶೋಕ್ ಭೂಷನ್, ಆರ್ ಸುಭಾಷ್ ರೆಡ್ಡಿ ಹಾಗೂ ಎಮ್ ಆರ್ ಶಾ ಇರುವ ತ್ರಿಸದಸ್ಯ ಪೀಠ ಹೇಳಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದ ಬಳಿಕ, ಆರೋಗ್ಯ ಕಾರ್ಯಕರ್ತರಿಗೆ ಸಂಬಳ ಪಾವತಿಸುವ ನಿಟ್ಟಿನಲ್ಲಿ ಜೂನ್ 18 ರಂದು ಎಲ್ಲಾ ರಾಜ್ಯಗಳಿಗೆ ಅಗತ್ಯ ಆದೇಶಗಳನ್ನು ನೀಡಲಾಗಿದೆ. ಅನೇಕ ರಾಜ್ಯಗಳು ನಿರ್ದೇಶನಗಳನ್ನು ಪಾಲಿಸಿವೆ ಆದರೆ ಮಹಾರಾಷ್ಟ್ರ, ಪಂಜಾಬ್, ತ್ರಿಪುರ ಮತ್ತು ಕರ್ನಾಟಕದಂತಹ ಕೆಲವು ರಾಜ್ಯಗಳು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡಿಲ್ಲ ಎಂದು ಮೆಹ್ತಾ ಹೇಳಿದ್ದಾರೆ.