ಒಂದು ಕಡೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಆಗಸ್ಟ್ 31ರೊಳಗೆ ವಿಚಾರಣೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯೂ ವೇಗ ಪಡೆದುಕೊಂಡಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ ಲಖನೌದ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಷಿ ನಿನ್ನೆಯಷ್ಟೇ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಅದರ ಬೆನ್ನಲ್ಲೇ ಶುಕ್ರವಾರ ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕ ಮತ್ತು ರಾಮಜನ್ಮಭೂಮಿ ರಥಯಾತ್ರೆ ಮೂಲಕ ದೇಶದಲ್ಲಿ ರಾಮಜನ್ಮಭೂಮಿ ರಾಜಕಾರಣಕ್ಕೆ ನಾಂದಿ ಹಾಡಿದ ಲಾಲ್ ಕೃಷ್ಣ ಅಡ್ವಾಣಿ ವೀಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ಹೇಳಿಕೆ ದಾಖಲಿಸಿದ್ದಾರೆ.
ಪ್ರಾಸಿಕ್ಯೂಷನ್ ಸಾಕ್ಷ್ಯಗಳ ಪರಿಶೀಲನೆಯ ಬಳಿಕ ನ್ಯಾಯಾಲಯ, ಪ್ರಕರಣದ ಆರೋಪಿಗಳ ಹೇಳಿಕೆಗಳನ್ನು ದಾಖಲಿಸುವ ಪ್ರಕ್ರಿಯೆ ಆರಂಭಿಸಿದ್ದು, ತಿಂಗಳ ಆರಂಭದಲ್ಲಿ ಮತ್ತೊಬ್ಬ ನಾಯಕಿ ಉಮಾ ಭಾರತಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿತ್ತು. ಸದ್ಯ ದಿನಂಪತ್ರಿ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದ್ದು, ಶುಕ್ರವಾರ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ 92 ವರ್ಷದ ಅಡ್ವಾಣಿ ಅವರು ನ್ಯಾಯಪೀಠದ ಮುಂದೆ ವರ್ಚುವಲ್ ಆಗಿ ಹೇಳಿಕೆ ದಾಖಲಿಸಿದರು.
ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಶುಕ್ರವಾರ ಬೆಳಗ್ಗೆ 11ಕ್ಕೆ ಆರಂಭವಾದ ವಿಚಾರಣೆ, ಮಧ್ಯಾಹ್ನ 3.30ಕ್ಕೆ ಮುಕ್ತಾಯವಾಯಿತು. ಸುಮಾರು ನಾಲ್ಕೂವರೆ ತಾಸು ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು ಅಡ್ವಾಣಿ ಅವರಿಗೆ ಸುಮಾರು ನೂರು ಪ್ರಶ್ನೆಗಳನ್ನು ಕೇಳಿದರು. ಆದರೆ, ಅಡ್ವಾಣಿ ಅವರು ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದರು ಎಂದು ಅವರ ವಕೀಲರು ತಿಳಿಸಿದ್ದಾರೆ.
ಗುರುವಾರ ಮುರಳಿ ಮನೋಹರ ಜೋಷಿ ಕೂಡ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದ್ದರು ಮತ್ತು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ತಮ್ಮನ್ನು ಪ್ರಕರಣದಲ್ಲಿ ಸಿಲುಕಿಸಿದೆ ಎಂದು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದರು.. ಈ ಮೊದಲು ಹೇಳಿಕೆ ನೀಡಿದ್ದ ಉಮಾ ಭಾರತಿ ಕೂಡ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸುತ್ತಾ, ಅಂದಿನ ಕಾಂಗ್ರೆಸ್ ಸರ್ಕಾರ ರಾಜಕೀಯ ಸೇಡಿನ ಹಿನ್ನೆಲೆಯಲ್ಲಿ ತಮ್ಮನ್ನು ಪ್ರಕರಣದಲ್ಲಿ ಸಿಲುಕಿಸಿತ್ತು ಎಂದೇ ಹೇಳಿದ್ದರು.
ಈ ನಡುವೆ, ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದರು. ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ತಯಾರಿಗಳ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿತ್ತು.
ಹದಿನಾರನೇ ಶತಮಾನದ ಬಾಬರಿ ಮಸೀದಿಯನ್ನು 1992ರ ಡಿಸೆಂಬರ್ 6ರಂದು ನೆಲಸಮಗೊಳಿಸಲಾಗಿತ್ತು. ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳಿಗೆ ಸೇರಿದ ಕರಸೇವಕರು ಆ ಕಟ್ಟಡವನ್ನು ನೆಲಸಮಗೊಳಿಸಿದ್ದು, ಆ ಕೃತ್ಯಕ್ಕೆ ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಸಂಚು ನಡೆಸಿದ್ದರು ಮತ್ತು ಕುಮ್ಮಕ್ಕು ನೀಡಿದ್ದರು ಎಂಬ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ನಡೆಸುತ್ತಿದೆ.
ಕಳೆದ ವರ್ಷ ಅಯೋಧ್ಯೆಯ ವಿವಾದಿತ ಜಾಗದ ಕುರಿತ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದ ನ್ಯಾಯಾಲಯ, ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿತ್ತು ಮತ್ತು ಮಸೀದಿ ನಿರ್ಮಾಣಕ್ಕೆ ಪರ್ಯಾಯ ಜಾಗ ನೀಡುವಂತೆ ಹೇಳಿತ್ತು. ಜಾಗದ ಕುರಿತ ವಿವಾದ ಇತ್ಯರ್ಥವಾದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಇದ್ದ ಜಾಗದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ವೇಗ ಸಿಕ್ಕಿದೆ. ಆಗಸ್ಟ್ ಮೊದಲ ವಾರದಲ್ಲಿ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎನ್ನಲಾಗುತ್ತಿದೆ.
ಈ ನಡುವೆ ಆಗಸ್ಟ್ 31ಕ್ಕೆ ಮುನ್ನ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಬೇಕಾದ ಸುಪ್ರೀಂಕೋರ್ಟ್ ಗಡುವಿಗೆ ಸಿಲುಕಿರುವ ಸಿಬಿಐ ವಿಶೇಷ ನ್ಯಾಯಾಲಯ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಚುರುಕುಗೊಳಿಸಿದೆ.