ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ. ಅಲ್ಲದೆ ಸರ್ಕಾರ ದಸರಾದ ನೇರ ವೀಕ್ಷಣೆಗಾಗಿ ವರ್ಚುಯಲ್ ಪ್ರಸಾರ ಮಾಡಲಿದೆ. ಇದಕ್ಕೆ ರಾಜ್ಯದ ಜನರು ಕೂಡ ಸಹಕಾರ ನೀಡಬೇಕು ಎಂದು ಕೋರಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಸಾಂಸ್ಕೃತಿಕ ನಗರಿಯಲ್ಲಿ ದಿನ ಕಳೆದಂತೆ ಕರೋನಾ ಸೋಂಕು ಸಂಖ್ಯೆ ಅಧಿಕವಾಗುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತಕ್ಕೆ ಸವಾಲು ಎದುರಾಗಿದೆ, ಈ ನಡುವೆ ದಸರಾ ಕೂಡ ಆರಂಭವಾಗಿದೆ. ಈಗಾಗಲೇ ನಗರದಲ್ಲಿ ಹಬ್ಬದ ವಾತಾವರಣವಿದ್ದು, ಜಿಲ್ಲೆಗೆ ಆಗಮಿಸುತ್ತಿರುವವರ ಸಂಖ್ಯೆ ಅಧಿಕವಾಗಿದೆ. ಈ ಹಿನ್ನಲೆ ಕರೋನಾ ನಿಯಂತ್ರಣ ಕ್ರಮ ಅನಿವಾರ್ಯವಾಗಿದೆ. ಪ್ರವಾಸಿಗರನ್ನು ಜಿಲ್ಲೆಗೆ ಆಗಮಿಸದಂತೆ ತಡೆಯಲು ಸಾಧ್ಯವಿಲ್ಲ. ಆದರೆ ಪ್ರವಾಸಿ ತಾಣಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹಾಗಾಗಿ ಜನರೇ ಸ್ವಯಂ ಪ್ರೇರಿತರಾಗಿ ಈ ಬಗ್ಗೆ ಚಿಂತನೆ ನಡೆಸಿ, ಆರೋಗ್ಯದ ದೃಷ್ಟಿಯಿಂದ ಮನೆಯಲ್ಲಿರುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥ್ಸ್ವಾ ಮಿ, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಂಧೂರಿ ಈ ತೀರ್ಮಾನಕ್ಕೆ ಬಂದಿದ್ದಾರೆ.
ಕಳೆದ ವರ್ಷ ದಸರಾ ಸಮಯದಲ್ಲಿ ಲಕ್ಷಾಂತರ ಜನ ಮೈಸೂರಿಗೆ ಭೇಟಿ ನೀಡಿದ್ದಾರೆ. ಈ ವರ್ಷ ಸೋಂಕು ಹಡುತ್ತಿರುವುದರಿಂದ ಈ ಸಂಖ್ಯೆಯ ಜನರು ಮೈಸೂರಿಗೆ ಆಗಮಿಸಿದರೆ ಹೆಚ್ಚಿನ ಜನರಿಗೆ ಸೋಂಕು ಹರಡಬಹುದು ಎಂಬ ಉದ್ದೇಶದಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ ಹಾಗೂ ನಂಜನಗೂಡು ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ
ಮೃಗಾಲಯಕ್ಕೆ 15 ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಬುಧವಾರ ಮಧ್ಯರಾತ್ರಿಯಿಂದಲೇ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.