ಕೋವಿಡ್-19 ನಿಯಂತ್ರಿಸಲೆಂದು ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ರಷ್ಯಾದಲ್ಲಿ ಬಾಕಿಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳುವಂತೆ ರಾಜ್ಯದ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ನಿಷೇಧ ಇರುವುದರಿಂದ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಪ್ರದೇಶಗಳ ಸುಮಾರು 200 ಕ್ಕೂ ಅಧಿಕ ವಿದ್ಯಾರ್ಥಿಗಳು ರಷ್ಯಾದಲ್ಲಿ ಸಿಲುಕಿಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಸದ್ಯದ ಕರೋನಾ ಮತ್ತು ಲಾಕ್‌ಡೌನ್ ಪರಿಸ್ಥಿತಿಯನ್ನು ನಿಭಾಯಿಸಲು ಅವರಿಗೆ ಕಷ್ಟವಾಗುತ್ತಿದೆ. ಆದುದರಿಂದ ಅವರನ್ನು ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಂಡಿದ್ದಾರೆ.
ಕರೋನಾ ಕಾರಣದಿಂದ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ʼವಂದೇ ಭಾರತ್ ಮಿಷನ್ʼ ಯೋಜನೆಯಡಿ ವಿಮಾನಗಳನ್ನು ಬಿಟ್ಟಿತ್ತು. ಆದರೆ ರಷ್ಯಾಕ್ಕೆ ಕಳುಹಿಸಲಾಗಿರುವ ಎಲ್ಲಾ ವಿಮಾನಗಳು ಜೂನ್ 30ರವರೆಗೂ ಖಾಲಿ ಇರಲಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ಭಾರತಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇನ್ನೊಂದು ಹಂತದ ವಂದೇ ಭಾರತ್ ಮಿಷನ್ ಯೋಜನೆಯನ್ನು ಶುರುಮಾಡಿ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್ ಕರೆತರಬೇಕೆಂದು ಜಿ.ಸಿ. ಚಂದ್ರಶೇಖರ್ ಒತ್ತಾಯಿಸಿದ್ದಾರೆ.
ಇದಲ್ಲದೆ ರಷ್ಯಾದಲ್ಲಿ ಸಿಲುಕಿರುವ ಭಾರತೀಯ ಮೂಲದ ವಿದ್ಯಾರ್ಥಿಗಳು ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಹಾಗೂ ಭಾರತಕ್ಕೆ ಮರಳಲಾಗದೆ ಪರಿತಪಿಸುತ್ತಿದ್ದಾರೆ. ಎರಡೂ ವಿಷಯದಲ್ಲಿ ಅವರಿಗೆ ಅಗತ್ಯ ಸಹಕಾರ ನೀಡುವಂತೆ ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಸೂಚಿಸಬೇಕು ಎಂದು ಪ್ರಧಾನಿ ಮೋದಿಗೆ ಪತ್ರ ಬರೆದ ಪತ್ರದಲ್ಲಿ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಕೇಳಿಕೊಂಡಿದ್ದಾರೆ.