ರಾಜ್ಯದಲ್ಲಿ ಶಾಲೆಗಳ ಪುನರಾರಂಭ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಶಾಲೆಗಳ ಪುನರಾರಂಭದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕರೋನಾ ಸಾಂಕ್ರಾಮಿಕ ರೋಗ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಸಂಬಂಧ ಶಿಕ್ಷಣ ಇಲಾಖೆ ವರದಿಯೊಂದನ್ನು ಸಿದ್ಧಪಡಿಸಿದ್ದು, ಸೋಮವಾರ ಈ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ ನಂತರ ಈ ವರದಿಯ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗುತ್ತದೆ. ಈ ವರದಿ ಶಾಲೆಗಳ ಪುನರಾರಂಭದ ಬಗ್ಗೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಯ ಆಯುಕ್ತರ ಅಭಿಪ್ರಾಯಗಳನ್ನು ಒಳಗೊಂಡಿದೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಳ್ಳಲಿದ್ದು, ಶಾಲೆಗಳ ಆರಂಭದ ಸಾಧಕ- ಬಾಧಕಗಳ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಡಿಸೆಂಬರ್ ನಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗುವುದು ಎಂಬ ಮಾತುಗಳು ಕೇಳಿಬರುತ್ತಿವೆಯಾದರೂ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಈಗಾಗಲೇ ಹೇಳಿದ್ದಾರೆ. ಎಲ್ಲವನ್ನು ಸಮಗ್ರವಾಗಿ ಚರ್ಚಿಸಿದ ನಂತರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದು, ಸೋಮವಾರದ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್, ಡಿಸೆಂಬರ್ ಎರಡನೇ ವಾರದಿಂದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ–ಕಾಲೇಜು ಪ್ರಾರಂಭಿಸಬಹುದು ಎಂದು ನ.9ರಂದು ಶಿಫಾರಸು ಮಾಡಿದ್ದರು.