
ಉತ್ತರ ಪ್ರದೇಶದ ಲಕ್ನೋದ (Lacknow) ಸಾರಿಗೆ ನಗರದಲ್ಲಿ ಶನಿವಾರ ಸಂಜೆ ಮೂರು ಅಂತಸ್ತಿನ ಕಟ್ಟಡ ಕುಸಿದು (Building Collapse) ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 28 ಜನರನ್ನು ರಕ್ಷಿಸಲಾಗಿದೆ. ಹಲವಾರು ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾತನಾಡಿದ ಲಕ್ನೋ ಪೊಲೀಸ್ ಆಯುಕ್ತ ರೋಶನ್ ಜಾಕೋಬ್, ಈವರೆಗೆ ಐದು ಶವಗಳು ಪತ್ತೆಯಾಗಿವೆ. ಸಾರಿಗೆ ನಗರ ಪ್ರದೇಶದಲ್ಲಿ ಕುಸಿದ ಕಟ್ಟಡದ ಅವಶೇಷಗಳಿಂದ 28 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಹೇಳಿದರು.

ಕಟ್ಟಡದ ಬಳಿ ನಿಲ್ಲಿಸಿದ್ದ ಟ್ರಕ್ ಕೂಡ ಕಟ್ಟಡದ ಅವಶೇಷಗಳು ಬಿದ್ದು ನಜ್ಜುಗುಜ್ಜಾಗಿದೆ. ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಈ ಕಟ್ಟಡವನ್ನು ಗೋದಾಮಿನಂತೆ ಬಳಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್), ಅಗ್ನಿಶಾಮಕ ಇಲಾಖೆ, ಪೊಲೀಸ್ ಮತ್ತು ಕಂದಾಯ ಇಲಾಖೆಯ ತಂಡಗಳು ಸ್ಥಳದಲ್ಲಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಲ್ಲಾ ಬೆಳವಣಿಗೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಲಕ್ನೋದ ಸಾರಿಗೆ ನಗರದಲ್ಲಿ ಕಟ್ಟಡ ಕುಸಿದ ಘಟನೆಯ ಬಗ್ಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪರಿಶೀಲಿಸಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳು, ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಮತ್ತು ಗಾಯಾಳುಗಳನ್ನು ಸರಿಯಾದ ಚಿಕಿತ್ಸೆಗಾಗಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.