ಬೆಂಗಳೂರು: ಇಂದು ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್’ನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು, ಜೊತೆಗೆ ರಾಜ್ಯದಲ್ಲಿ ಹೊಸದಾಗಿ 7 ವಿಶ್ವವಿದ್ಯಾಲಯಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆಗೆ ಘೋಷಿಸಲಾಗಿದೆ.
ಎನ್’ಇಪಿ ಶಿಕ್ಷಣವನ್ನು ಪ್ರಾಥಮಿಕ ಶಿಕ್ಷಣದಲ್ಲೂ ಜಾರಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ 1,230 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ. ಜೊತೆಗೆ 15 ಸಾವಿರ ಶಿಕ್ಷಕರನ್ನು ನೇಮಿಸಲು ತೀರ್ಮಾನಿಸಲಾಗಿದೆ.
ಬಿಬಿಎಂಪಿ ಶಾಲೆಗಳ ಅಭಿವೃದ್ಧಿಗೆ 180 ಕೋಟಿ ರೂ.ಗಳನ್ನು ನೀಡಲು ಯೋಜಿಸಲಾಗಿದೆ. ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮತ್ತು ಮಹಿಳಾ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿಗೆ ನಿರ್ಧರಿಸಲಾಗಿದೆ.
ಶಾಲಾ, ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಮಕ್ಕಳ ಬಸ್ ಯೋಜನೆಯನ್ನು 100 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳ್ಳಲಿದ್ದು, 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ ಆರೋಗ್ಯ ಮತ್ತು ಪೌಷ್ಠಿಕತೆಗೆ 3,000 ಕೋಟಿ ಅನುದಾನವನ್ನು ಸಿಎಂ ಘೋಷಿಸಿದ್ದಾರೆ.