ಲಕ್ನೋ: ಅಯೋಧ್ಯೆಯ ಶ್ರೀ ರಾಮ ಮಂದಿರದ ಕಾಣಿಕೆ ಮತ್ತು ದೇಣಿಗೆ ಹಣ ನಾಪತ್ತೆ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಕೂಡ ಬಂಧಿಸಲಾಗಿದೆ ಎನ್ನುವ ಮಾಹಿತಿ ಹೊರ ಬಿದ್ದಿದೆ.

ಬಂಧಿತರೆಲ್ಲರೂ ದೇವಸ್ಥಾನದ ಕಾಣಿಕೆ ಹಣ ಎಣಿಸುವ ತಂಡದಲ್ಲಿದ್ದು, ದೇವಸ್ಥಾನದ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಅನುಕಲ್ಪ್ ಮಿಶ್ರಾ, ಅವಿನಾಶ್ ಶುಕ್ಲಾ, ಕರುಣೇಶ್ ಪಾಂಡೆ, ಲವ್ ಕುಶ್ ಮಿಶ್ರಾ, ರಾಮ ಶಂಕರ್ ಮಿಶ್ರಾ ಮತ್ತು ಸುಭಾಷ್ ಶ್ರೀವಾಸ್ತವ ಸೇರಿದಂತೆ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ.

ಪ್ರಸ್ತುತ ಈ ಪ್ರಕರಣದಲ್ಲಿ ಚಂಪತ್ ರಾಯ್ ಅಥವಾ ಟ್ರಸ್ಟ್‌ನ ಸದಸ್ಯ ಅನಿಲ್ ಮಿಶ್ರಾ ವಿರುದ್ಧ ಯಾವುದೇ ಅಧಿಕೃತ ಎಫ್‌ಐಆರ್ ದಾಖಲಾಗಿಲ್ಲ. ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಬಂಧನಗಳ ಸಾಧ್ಯತೆ ಇದೆ.






