ನಾಳೆ ಬೆಳಿಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ಹಿಜಾಬ್ ವಿವಾದದ ಅರ್ಜಿಯ ತೀರ್ಪು ಪ್ರಕಟಿಸಲಾಗಲಿದ್ದು, ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಒಂದುವಾರ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಇಂದು ಎಲ್ಲಾ ಡಿಸಿಪಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ರಾತ್ರಿ 10.30ಕ್ಕೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ನಗರದಲ್ಲಿನ ಶಾಲಾ-ಕಾಲೇಜುಗಳ ಬಳಿಯಲ್ಲಿ ಭದ್ರತೆಯನ್ನು ಹೆಚ್ಚಿಸುವ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ. ಅಲ್ಲದೇ ಬೆಂಗಳೂರು ನಗರಾದ್ಯಂತ ನಾಳೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇನ್ನೂ ರಾತ್ರಿ 8.30ಕ್ಕೆ ಆಯಾ ಜಿಲ್ಲೆಗಳಲ್ಲಿಯೂ ಡಿಸಿ, ಎಸ್ಪಿಗಳು ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೂಚನೆ ನೀಡಲಾಗುತ್ತಿದೆ.