ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಮುಸ್ಲಿಂ ಸಮದಾಯದ ವಿರುದ್ಧ ದ್ವೇಷಕಾರುವ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಿವಾಸಿ ಮೊಹಮ್ಮದ್ ಖಲೀವುಲ್ಲಾ ಸಲ್ಲಿಸಿರುವ ಅರ್ಜಿಯಲ್ಲಿ ದ್ವೇಷಕಾರುವ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಲಾಗಿದೆ.
ಅರ್ಜಿದಾರರ ಪರ ವಕೀಲರಾದ ರಹ್ಮತುಲ್ಲಾ ಕೊತ್ವಾಲ್ ಶುಕ್ರವಾರ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಿದ್ದರು.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ಅರ್ಜಿಯ ತುರ್ತು ವಿಚಾರಣೆಯ ಮನವಿಯನ್ನು ತಳ್ಳಿ ಹಾಕಿದ್ದು, ನಿಗದಿತ ಕ್ರಮದಂತೆ ಅರ್ಜಿಯ ವಿಚಾರಣೆ ಬರಲಿ ಎಂದು ಸೂಚಿಸಿದರು.
ಬಿಜೆಪಿ ನಾಯಕರು ಪದೇ ಪದೇ ದ್ವೇಷ ಪಸರಿಸುವ ಭಾಷಣ ಮಾಡುತ್ತಿದ್ದಾರೆ. ಈ ಮೂಲಕ ಸಮಾಜದಲ್ಲಿ ತಾರತಮ್ಯ ಉಂಟು ಮಾಡಿ, ದ್ವೇಷ ಹರಡಿ ಶಾಂತಿ ಕದಡಲು ಪ್ರಯತ್ನಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಈ ಸಂಬಂಧ ಮಾರ್ಚ್ 28ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ. ಆದ್ರೆ ಇವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ.
ಅರ್ಜಿಯಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಸಿ.ಟಿ.ರವಿ, ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಮತ್ತು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಮುಖಂಡರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.
ಈಗಾಗಲೇ ಶಿವಮೊಗ್ಗದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಂಬಂಧ ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ವರದಿ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ನ್ಯಾಯಾಲಯ ಈ ಅರ್ಜಿಯನ್ನು ಪರಿಗಣಿಸಿ ಬಿಜೆಪಿ ಶಾಸಕರು, ಸಚಿವರ ವಿರುದ್ಧ ಕ್ರಮಕ್ಕೆ ಮುಂದಾದರೆ ಆಗ ಕೋಮು ಭಾವನೆ ಕೆರಳಿಸುವ ಹೇಳಿಕೆಗಳಿಗೆ ಬ್ರೇಕ್ ಬೀಳಲಿದೆ.