ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನಡೆದ ಪರೀಕ್ಷೆಯ ಭೌಗೋಳಿಕ (geography) ಪರೀಕ್ಷೆಯಲ್ಲಿ 11 ಪ್ರಶ್ನೆಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಮೈಸೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿಯನ್ನು ಭಾನುವಾರ ಬಂಧಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಮಲ್ಲೇಶ್ವರಂ ಪೊಲೀಸರು ಆರೋಪಿಗಳಲ್ಲಿ ಒಬ್ಬರಾದ ಮೈಸೂರಿನ ಸೌಮ್ಯಾ ಆರ್ (30) ಎಂಬುವವರನ್ನು ಬಂಧಿಸಿದ್ದಾರೆ. ಆಕೆಯ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಪರೀಕ್ಷೆಯ ದಿನದಂದು (ಮಾರ್ಚ್ 14) ಸೌಮ್ಯ ಅವರ ಫೋನ್ನಿಂದ ಅನೇಕ ಅಭ್ಯರ್ಥಿಗಳಿಗೆ ಭೂಗೋಳಶಾಸ್ತ್ರದ ಪತ್ರಿಕೆಯಿಂದ ಕನಿಷ್ಠ 11 ಪ್ರಶ್ನೆಗಳನ್ನು ವಾಟ್ಸಾಪ್ ಮೂಲಕ ಕಳುಹಿಸಲಾಗಿದೆ ಎಂದು ರಮ್ಯಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಸೌಮ್ಯಾ ಹಲವು ಪ್ರಶ್ನೆಗಳನ್ನು ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ‘ನೊಂದ ಅಭ್ಯರ್ಥಿಗಳು’ ಸಹಿ ಮಾಡಿದ ಪತ್ರವನ್ನು ರಮ್ಯಾ ಅವರಿಗೆ ಸಲ್ಲಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಸೌಮ್ಯಾಳನ್ನು ಬಂಧಿಸಿದ ತಕ್ಷಣ ಪೊಲೀಸರು ಆಕೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.