ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ರಣಭೀಕರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ಬಳಿ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಸೋದರಿಯರು ಮೃತಪಟ್ಟಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಿದ ಭಾರಿ ಪ್ರಮಾಣದ ಮಳೆಯಿಂದ ಕುಮಾರಧಾರ ಸಮೀಪದ ಪರ್ವತಮುಖಿಯಲ್ಲಿ ಗುಡ್ಡ ಜರಿದು ಮನೆ ಕುಸಿದಿದೆ. ಮನೆ ಮೇಲೆ ಗುಡ್ಡ ಕುಸಿದಿದ್ದರಿಂದ ಕಡಬ ತಾಲೂಕಿನ ಪರ್ವತಮುಖಿ ಪ್ರದೇಶದಲ್ಲಿ ಗುಡ್ಡ ಕುಸಿದು ಶ್ರುತಿ (11), ಜ್ಞಾನಶ್ರೀ (6) ಮೃತಪಟ್ಟಿದ್ದಾರೆ.
ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳೀಯರ ಸಹಕಾರದಿಂದ ಶವಗಳನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಪುತ್ತೂರು ಎಸಿ ಗಿರೀಶ್ ನಂದನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಗ್ರಾಮಗಳು ತತ್ತರಿಸಿವೆ. ಭಾರೀ ಮಳೆಯಿಂದ ಕುಕ್ಕೆಯ ಆದಿ ಸುಬ್ರಹ್ಮಣ್ಯ ದೇವಸ್ಥಾನ ಮುಳುಗಡೆಯಾಗಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಎರಡು ದಿನ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.