ರಾಜ್ಯ ಮುಖ್ಯಮಂತ್ರಿ ಸ್ಥಾನದಿಂದ ಬಸವರಾಜ ಬೊಮ್ಮಾಯಿ ಬದಲಾಗಬಹುದು ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.
ತುಮಕೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಚರಣೆಗೂ ಮುನ್ನವೇ ಬಸವರಾಜ ಬೊಮ್ಮಾಯಿ ಬದಲು ಮುಖ್ಯಮಂತ್ರಿ ಮತ್ತೊಬ್ಬರು ಆಗಲಿದ್ದಾರೆ. ಈ ಬಗ್ಗೆ ಮಾತುಕತೆ ನಡೆದಿದೆ ಎಂದರು.
ಕಳೆದ ಒಂದು ವರ್ಷದಲ್ಲಿ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಆದರೂ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆದಿವೆ. ನಾವು ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇವೆ ಎಂದು ಸುರೇಶ್ ಗೌಡ ವಿವರಿಸಿದರು.
ಕೇಂದ್ರ ಸಚಿವ ಅಮಿತ್ ಶಾ ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ ವೇಳೆ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದರು.

ಬಿಜೆಪಿ ಆಡಳಿತ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ 8ರಿಂದ 10 ತಿಂಗಳು ಬಾಕಿ ಇರುವಾಗಲೇ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ಈಗ ಕರ್ನಾಟಕದಲ್ಲೂ ಆಗಬಹುದು ಎಂದರು.
ಇದೇ ವೇಳೆ ಕೇಂದ್ರ ಸಚಿವೆ ಆಗಿರುವ ಶೋಭಾ ಕರಂದ್ಲಾಜೆ ರಾಜ್ಯ ರಾಜಕೀಯಕ್ಕೆ ಮರಳುತ್ತಾರಾ ಎಂಬ ಪ್ರಶ್ನೆಗೆ ನನಗೆ ಆ ಬಗ್ಗೆ ಮಾಹಿತಿಯಿಲ್ಲ. ಯಡಿಯೂರಪ್ಪ ಆಪ್ತರಲ್ಲಿ ಒಬ್ಬರಾಗಿರುವ ಶೋಭಾ ಕರಂದ್ಲಾಜೆ ಸಿಎಂ ಆಗಬಹುದು ಎಂಬ ಬಗ್ಗೆ ಮಾಹಿತಿ ಇಲ್ಲ ಎಂದರು.