ಬೆಂಗಳೂರು: ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್. ಇನ್ನು 2 ತಿಂಗಳಲ್ಲಿ ಚುನಾವಣೆ ಇರುವುದರಿಂದ ಇದನ್ನು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಎನ್ನಬಹುದು ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ಗೆ ವಿರೋಧ ಪಕ್ಷದ ನಾಯಕರಾದ ಪ್ರತಿಕ್ರಿಯೆ ನೀಡಿದ್ದಾರೆ.
ಬಜೆಟ್ ಗಾತ್ರ 3,09,182 ಕೋಟಿ ಇದೆ. ಕಳೆದ ಬಜೆಟ್ ನಲ್ಲಿ ಏನೇನು ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದರು, ಅದರಲ್ಲಿ 56 ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿಲ್ಲ. 2018ರಲ್ಲಿ ಬಿಜೆಪಿ ಪಕ್ಷ ಜನರಿಗೆ ಪ್ರಣಾಳಿಕೆಯಲ್ಲಿ ಶೇ.90ಭರವಸೆಗಳನ್ನು ಈಡೇರಿಸಿಲ್ಲ. ಇದಕ್ಕೆ ಸರ್ವಜ್ಞನ ವಚನ,
“ಆಡದಲೆ ಮಾಡುವವನು ರೂಢಿಯೊಳಗುತ್ತಮನು,
ಆಡಿ ಮಾಡುವವನು ಮಧ್ಯಮನು,
ತಾನಾಡಿಯೂ ಮಾಡದವನು ಅಧಮನು” ಎಂಬ ವಚನ ಬಿಜೆಪಿ ಸರ್ಕಾರಕ್ಕೆ ಹೆಚ್ಚು ಹೊಂದಾಣಿಕೆಯಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಜನರನ್ನು ಸಾಲಗಾರರನ್ನಾಗಿ ಮಾಡಿದೆ
ಈ ವರ್ಷದ ಅಂತ್ಯಕ್ಕೆ 5,64,896 ಕೋಟಿ ರೂ. ಸಾಲ ಆಗುತ್ತದೆ ಎಂದು ಹೇಳಿದ್ದಾರೆ. ನಾವು ಅಧಿಕಾರದಿಂದ ಇಳಿದಾಗ ರಾಜ್ಯದ ಮೇಲೆ 2 ಲಕ್ಷದ 42 ಸಾವಿರ ಕೋಟಿ ರೂ. ಇತ್ತು, ಅಂದರೆ ಈಗ 3 ಲಕ್ಷದ 22 ಸಾವಿರ ಕೋಟಿ ಸಾಲ ಹೆಚ್ಚಾಗಿದೆ. 2018-19ರಲ್ಲಿ ಸಮ್ಮಿಶ್ರ ಸರ್ಕಾರ ಮಾಡಿದ್ದ ಸಾಲ 41,914 ಕೋಟಿ ರೂ. ಇದನ್ನು ಬಿಟ್ಟರೆ ಉಳಿದ ನಾಲ್ಕು ವರ್ಷದಲ್ಲಿ ಬಿಜೆಪಿ ಸರ್ಕಾರ 2,54,760 ಕೋಟಿ ರೂ. ಸಾಲ ಮಾಡಿದೆ. ಸಾಲ ಹೆಚ್ಚಾಗಿರುವುದರಿಂದ ಕೇವಲ ಬಡ್ಡಿ ರೂಪದಲ್ಲಿ ನಾವು 34,000 ಕೋಟಿ ರೂ. ಹಣ ಪಾವತಿ ಮಾಡಬೇಕಾಗುತ್ತದೆ. ಈ ಸರ್ಕಾರ ರಾಜ್ಯದ ಜನರನ್ನು ಸಾಲಗಾರರನ್ನಾಗಿ ಮಾಡಿದೆ ಎಂದು ಆರೋಪಿಸಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯದ ಜನರಿಗೆ ಅನ್ಯಾಯ
ಕರ್ನಾಟಕದಿಂದ ವಿವಿಧ ತೆರಿಗೆಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂ. ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ. ಕೇಂದ್ರ ತೆರಿಗೆಯಲ್ಲಿ ನಮ್ಮ ಪಾಲು 34,596 ಕೋಟಿ ರೂ. ಬರಲಿದೆ ಎಂದು ಅಂದಾಜು ಮಾಡಿದ್ದಾರೆ. ಮುಂದಿನ ವರ್ಷ 37,250 ಕೋಟಿ ರೂ. ಬರಲಿದೆ ಎಂದಿದ್ದಾರೆ. 37,000 ಕೋಟಿ ಕೇಂದ್ರ ಸರ್ಕಾರದ ಅನುದಾನಗಳು, ಬಜೆಟ್ ಎಸ್ಟಿಮೇಟ್ ನಲ್ಲಿ ಈ ವರ್ಷದಲ್ಲಿ 17,281 ಕೋಟಿ ಇತ್ತು, ಪರಿಷ್ಕೃತ ಅಂದಾಜಿನಲ್ಲಿ 12,391 ಕೋಟಿ ರೂ. ಗೆ ಇಳಿದಿತ್ತು. ಅಂದರೆ ಕೇಂದ್ರ ಸರ್ಕಾರದ ಆರ್ಥಿಕ ನೆರವು 5,000 ಕೋಟಿ ಕಡಿಮೆಯಾಗಿದೆ ಎಂದು ಸರ್ಕಾರವೇ ಅಂದಾಜು ಮಾಡಿದೆ. ಮುಂದಿನ ವರ್ಷ 13,005 ಕೋಟಿ ಕೇಂದ್ರದ ಸಹಾಯಧನ ಬರಲಿದೆ ಎಂದು ಹೇಳಿದ್ದಾರೆ. ಇವೆರಡು ಒಟ್ಟು ಸೇರಿಸಿದ್ರೆ 50,257 ಕೋಟಿ ಆಗುತ್ತದೆ, ನಮ್ಮಿಂದ ವಸೂಲಾಗುವ ತೆರಿಗೆ 4 ಲಕ್ಷದ 75 ಸಾವಿರ ಕೋಟಿ. ಇದು ಕೇಂದ್ರ ಸರ್ಕಾರದಿಂದ ರಾಜ್ಯದ ಜನರಿಗೆ ಆಗಿರುವ ದೊಡ್ಡ ಅನ್ಯಾಯ.
ಕೇಂದ್ರದ ನೆರವಿನ ಪ್ರಮಾಣ ಇಳಿಕೆ
ಈ ಬಜೆಟ್ ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಎಲ್ಲಿಯೂ ಪ್ರಸ್ತಾಪವಿಲ್ಲ. ಇಂದು ಇಷ್ಟೊಂದು ಸಾಲ ಆಗಲು ಕೇಂದ್ರ ಸರ್ಕಾರದಿಂದ ಬರುತ್ತಿರುವ ಅನುದಾನ ಕಡಿಮೆಯಾಗುತ್ತಿರುವುದು ಕಾರಣ. ನಮ್ಮ ತೆರಿಗೆ ಪಾಲು, ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಕೇಂದ್ರದ ಪಾಲು ಕಡಿಮೆಯಾದದ್ದು ಹಾಗೂ ಕೇಂದ್ರದಿಂದ ಬರುವ ಆರ್ಥಿಕ ನೆರವಿನ ಪ್ರಮಾಣ ಇಳಿಕೆಯಾಗಿರುವುದರಿಂದ ಸುಮಾರು 80,000 ಕೋಟಿಯಷ್ಟು ಸಾಲ ಮಾಡಬೇಕಾಗಿದೆ ಎಂದರು.
ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿದೆ
ಸರ್ಕಾರದ ಕೆಟ್ಟ ಆರ್ಥಿಕ ನೀತಿಯಿಂದಾಗಿ ರಾಜ್ಯ ಸಾಲದ ಸುಳಿಗೆ ಸಿಲುಕಿದೆ. ಕಳೆದ ವರ್ಷ ಅಸಲು 14,000 ಕೋಟಿ ಸಂದಾಯ ಮಾಡಬೇಕಿತ್ತು, ಬಡ್ಡಿ ರೂಪದಲ್ಲಿ 34,000 ಕೋಟಿ ಕಟ್ಟಬೇಕಿರುವುದರಿಂದ ಸುಮಾರು ಅಸಲು, ಬಡ್ಡಿ ರೂಪದಲ್ಲಿ 48,000 ಕೋಟಿ ಸಾಲ ಮರುಪಾವತಿಗೆ ಹೋಗುತ್ತದೆ. ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿದೆ.
ಈ ವರ್ಷ ಕೇಂದ್ರ ಸರ್ಕಾರ ಗೊಬ್ಬರದ ಮೇಲಿನ ಸಬ್ಸಿಡಿಯನ್ನು 50,000 ಕೋಟಿ ಕಡಿಮೆ ಮಾಡಿದೆ, ಇದರಿಂದ ರಸಗೊಬ್ಬರದ ಬೆಲೆ ಜಾಸ್ತಿಯಾಗುತ್ತದೆ. ಇದರಿಂದ ರೈತರು ವ್ಯವಸಾಯಕ್ಕೆ ಹಾಕುವ ಬಂಡವಾಳ ಹೆಚ್ಚಾಗುತ್ತದೆ, ಲಾಭ ಕಡಿಮೆಯಾಗುತ್ತದೆ ಎಂದರು.
ಬೆಲೆ ಏರಿಕೆ ನಿಯಂತ್ರಣ ಮಾಡಿಲ್ಲ
5 ವರ್ಷದಲ್ಲಿ 6% ಬೆಲೆಯೇರಿಕೆಯಿದೆ. ಬೆಲೆಯೇರಿಕೆ ನಿಯಂತ್ರಣ ಮಾಡುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡಿಲ್ಲ. ಇದನ್ನು ಲೆಕ್ಕ ಹಾಕಿದರೆ ತಲಾ ಆದಾಯ ಕಡಿಮೆಯಾಗುತ್ತದೆ. ತಲಾ ಆದಾಯದ ಏರಿಕೆ ಬೆಲೆಯೇರಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಇಲ್ಲ. ಮಾರ್ಚ್ ತಿಂಗಳಿನಲ್ಲಿ ಆರ್ಥಿಕ ಇಲಾಖೆಯವರು ಹಣ ಖರ್ಚು ಮಾಡಲು ಒಪ್ಪಿಗೆಯನ್ನೇ ನೀಡಲ್ಲ. ಪ್ರಸಕ್ತ ವರ್ಷ ಘೋಷಣೆ ಮಾಡಿದ ಅನುದಾನದಲ್ಲಿ ಖರ್ಚಾಗಿರುವ ಹಣ 56% ಮಾತ್ರ. ಇನ್ನುಳಿದ 15 ದಿನದಲ್ಲಿ 44% ಖರ್ಚು ಮಾಡಲು ಆಗುತ್ತಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.