ಬೆಂಗಳೂರು: ರಾಜ್ಯದ 224 ಕ್ಷೇತ್ರಗಳ ಪೈಕಿ 70ರಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮನವಿ ಸಲ್ಲಿಸಿದ್ದಾರೆ.
ಲಿಂಗಾಯತ-ವೀರಶೈವ ಸಮುದಾಯ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲೇಬೇಕೆಂದರೆ ವೀರಶೈವ ಲಿಂಗಾಯತ ಸಮುದಾಯದ ಬೆಂಬಲ ಅತ್ಯಗತ್ಯ. ಲಿಂಗಾಯತರ ಬೆಂಬಲದಿಂದಲೇ ಬಿಜೆಪಿ ಅತಿ ಹೆಚ್ಚಿನ ಸ್ಥಾನ ಗೆಲ್ಲುತ್ತಿದೆ. ಬಿಜೆಪಿ ಮತ ಬ್ಯಾಂಕ್ ಕಬಳಿಸಬೇಕೆಂದರೆ ಕಾಂಗ್ರೆಸ್ ಪಕ್ಷದಲ್ಲಿನ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಹೆಚ್ಚಿನ ಟಿಕೆಟ್ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ 40ಕ್ಕೂ ಹೆಚ್ಚು ಈ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. 16 ಜನ ಗೆದ್ದಿದ್ದಾರೆ. ಈ ಬಾರಿ 70 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಸೋಲಿಸಲು ಸಹಾಯಕವಾಗುತ್ತದೆ ಎಂದು ಹೇಳಿದ್ದಾರೆ.
ಪಕ್ಷದ ಹಾಲಿ ಶಾಸಕರ ಕ್ಷೇತ್ರಗಳನ್ನು ಹೊರತುಪಡಿಸಿ ವೀರಶೈವ ಮತ್ತು ಲಿಂಗಾಯತ ಸಮುದಾಯದ ಮತಗಳು ನಿರ್ಣಾಯಕವಾಗಿರುವ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಮುಖಂಡರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿರುವ ಅವರು, ಟಿಕೆಟ್ ಬಯಸಿದ ಕ್ಷೇತ್ರಗಳ ಪಟ್ಟಿಯನ್ನೂ ಉಲ್ಲೇಖಿಸಿದ್ದಾರೆ.






