ಬೆಂಗಳೂರು : ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹಾಗೂ ಪ್ರಶಾಂತ್ ಮಾಡಾಳು ವಿರುದ್ಧ ಕಾಂಗ್ರೆಸ್ ಸಮರ ಸಾರಿತ್ತು. ರಾಜ್ಯ ಬಿಜೆಪಿ ಸರ್ಕಾರವು ಭ್ರಷ್ಟಾಚಾರಕ್ಕೆ ನೀರೆರೆಯುತ್ತಿದೆ ಎಂದು ಆರೋಪಿಸಿದ್ದ ರಾಜ್ಯ ನಾಯಕರು ನಾಳೆ ರಾಜ್ಯಾದ್ಯಂತ ಎರಡು ಗಂಟೆಗಳ ಕಾಲ ಬಂದ್ಗೆ ಕರೆ ನೀಡಿದ್ದರು. ಆದರೆ ನಾಳೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬಂದ್ ನಿರ್ಧಾರದಿಂದ ಕಾಂಗ್ರೆಸ್ ಹಿಂದೆ ಸರಿದಿದೆ.
ಈ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಗಳನ್ನು ಖಂಡಿಸಿ ನಾಳೆ ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರಿಗೆ ಬಂದ್ಗೆ ಕರೆ ನೀಡಿದ್ದೆವು. ಆದರೆ ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಅಡಚಣೆ ಉಂಟಾಗಬಾರದು ಎಂಬ ಕಾರಣಕ್ಕೆ ನಾಳೆ ನಡೆಯಬೇಕಿದ್ದ ಬಂದ್ ಹಿಂಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರನ್ನು ಪಕ್ಷದಿಂದ ಉಚ್ಛಾಟಿಸಬೇಕು ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ನಾಳೆ ರಾಜ್ಯಾದ್ಯಂತ ಬಂದ್ ಕರೆ ನೀಡಿದ್ದರು. ಆದರೆ ಕಾಂಗ್ರೆಸ್ ಬಂದ್ನಿಂದ ಪರೀಕ್ಷೆ ಬರೆಯಬೇಕಾದ ವಿದ್ಯಾರ್ಥಿಗಳಿಗೆ ಏನಾದರೂ ಅಡಚಣೆ ಉಂಟಾದರೆ ತಮ್ಮ ಪಕ್ಷಕ್ಕೆ ಡ್ಯಾಮೇಜ್ ಉಂಟಾಗಬಹುದೆಂದು ಹೆದರಿ ಕಾಂಗ್ರೆಸ್ ಈ ನಿರ್ಧಾರಕ್ಕೆ ಬಂದಿದೆ ಎಂದು ಅಂದಾಜಿಸಲಾಗಿದೆ .
ಭ್ರಷ್ಟಾಚಾರ ಆರೋಪ ಎದುರಾದ ಬಳಿಕ ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಡಾಳು ವಿರೂಪಾಕ್ಷಪ್ಪ ಬಳಿಕ ತಲೆಮರೆಸಿಕೊಂಡಿದ್ದರು. ಆದರೆ ನಿನ್ನೆ ರಾಜ್ಯ ಹೈಕೋರ್ಟ್ನಲ್ಲಿ ಮಧ್ಯಂತರ ಜಾಮೀನು ಸಿಗುತ್ತಿದ್ದಂತೆಯೇ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಕ್ಷೇತ್ರದಲ್ಲಿ ದಿಢೀರ್ ಪ್ರತ್ಯಕ್ಷರಾಗಿದ್ದರು. ಭ್ರಷ್ಟಾಚಾರ ಪ್ರಕರಣದ ಆರೋಪಿ ವಿರೂಪಾಕ್ಷಪ್ಪರಿಗೆ ಬೆಂಬಲಿಗರು ನೀಡಿದ್ದ ಅದ್ಧೂರಿ ಸ್ವಾಗತ ಭಾರೀ ವಿವಾದವನ್ನು ಸೃಷ್ಟಿಸಿತ್ತು.