ನವದೆಹಲಿ:ಏ.೦೪: ಕಾಂಗ್ರೆಸ್ ಗೆದ್ದರೂ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲ್ಲ ಎನ್ನುವ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಂಯ್ಯ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದೆ. ಇದೀಗ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಹರಸಾಹಸ ಪಡುತ್ತಿದೆ. 2ನೇ ಪಟ್ಟಿ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಗೂ ಒಂದು ದಿನ ಮೊದಲೇ ಸಿದ್ದರಾಮಯ್ಯ ಸಿಎಂ ಹುದ್ದೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ. ಹೀಗಂತ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿ ಎನ್‌ಡಿಟಿವಿ ವರದಿ ಮಾಡಿದೆ. ಸಿದ್ದರಾಮಯ್ಯನವರ ಈ ಹೇಳಿಕೆಯಿಂದ ಕಾಂಗ್ರೆಸ್ನಲ್ಲಿ ತಲ್ಲಣ ಸೃಷ್ಟಿಸಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದು ಮತ್ತೊಂದು ಹಂತ ತಲುಪುವ ಮುನ್ನವೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಇದಕ್ಕೆ ನವದೆಹಲಿಯಲ್ಲಿ ಸ್ಪಷ್ಟನೆ ನೀಡಿದ್ದು, ನಾನು ಹೇಳಿದ್ದನ್ನು ತಿರುಚಿದ್ದಾರೆ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ..
ಸಿದ್ದರಾಮಯ್ಯ ನೀಡಿರುವ ಟ್ವೀಟ್ ಸಾರಾಂಶ
ನವದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ. ಪ್ರಜಾಭುಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಸಿಎಂ ಆಯ್ಕೆ ಆಗಲಿದೆ. ಸುದ್ದಿವಾಹಿನಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ಅಂತ ಹೇಳಿದ್ದೆ.
ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ನಾನು ಆಡದ ಮಾತುಗಳನ್ನು ಉಲ್ಲೇಖಿಸಿ ಎನ್ ಡಿಟಿವಿ ವರದಿಯೊಂದನ್ನು ಪ್ರಕಟಿಸಿದೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶದಿಂದ ಕೂಡಿದ್ದಾಗಿದೆ. ಎನ್.ಡಿ ಟಿವಿ ತಕ್ಷಣ ಈ ಬರಹವನ್ನು ಅಳಿಸಿಹಾಕಿ ತಿದ್ದುಪಡಿ ಪ್ರಕಟಿಸಬೇಕು ಎಂದು ಒತ್ತಾಯಿಸುತ್ತೇನೆ.
ನಮ್ಮ ಪಕ್ಷದ ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ಕೂಡಿ ಆಯ್ಕೆ ಮಾಡಲಿದೆ ಎನ್ನುವುದನ್ನು ನೂರು ಸಲ ಹೇಳಿದ್ದೇನೆ. ನನ್ನ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕುವ ವಿರೋಧ ಪಕ್ಷಗಳ ಹುನ್ನಾರಕ್ಕೆ ಮಾಧ್ಯಮಗಳು ಆಯುಧವಾಗಿ ಬಳಕೆಯಾಗಬಾರದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.












