ಬೆಂಗಳೂರು: ಏ.09: ಗೋಲ್ವಾಲ್ಕರ್ ಅವರ ಚಿಂತನ ಗಂಗಾ ಪುಸ್ತಕದಲ್ಲಿ, ಆರ್‌ಎಸ್‌ಎಸ್ ಮುಖವಾಣಿ ಆರ್ಗನೈಸರ್ ಪತ್ರಿಕೆಯಲ್ಲಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ್ದ ಸಂವಿಧಾನವನ್ನು ಟೀಕಿಸಲಾಗಿದೆ. ಆದರೆ ಆರ್‌ಎಸ್‌ಎಸ್‌ನ ರಾಜಕೀಯ ಸ್ವರೂಪವಾಗಿರುವ ಬಿಜೆಪಿ, ಈಗ ಸಂವಿಧಾನದ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಿರುವುದು ವಿಪರ್ಯಾಸವೇ ಸರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಕಲ್ಪ ಅಧಿವೇಶನ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಆರ್‌ಎಸ್‌ಎಸ್, ಹಿಂದೂ ಮಹಾಸಭಾ, ಬಿಜೆಪಿ ಸಂವಿಧಾನ ಹೇಳುವ ಸಮಾನತೆಗೆ ವಿರುದ್ಧವಾದ ಸಿದ್ಧಾಂತವನ್ನು ಹೊಂದಿವೆ ಎಂದು ಟೀಕಿಸಿದರು.
ಸಮಾಸಮಾಜ ಸ್ಥಾಪನೆ, ಎಲ್ಲರಿಗೂ ಉಚಿತ ಶಿಕ್ಷಣ ನೀಡುವುದು, ಸಂಪತ್ತಿನಲ್ಲಿ ಪಾಲುದಾರರನ್ನಾಗಿ ಮಾಡುವುದು ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಬೇಕಿಲ್ಲ. ಸಮಸಮಾಜ ನಿರ್ಮಾಣವಾದರೆ ಶೋಷಣೆಗೆ ಅವಕಾಶ ಇರುವುದಿಲ್ಲ. ಸಮಾಜದಲ್ಲಿ ಮೇಲು ಕೀಳು ಎಂಬ ತಾರತಮ್ಯ ಇದ್ದಾಗ ಮಾತ್ರ, ಶೋಷಣೆಗೆ ಅವಕಾಶ ಇರುತ್ತದೆ. ತಾವು ಮೇಲ್ವರ್ಗದ ಜನ ಎಂಬ ಅಭಿಪ್ರಾಯ ಸಮಾಜದಲ್ಲಿ ಯಾವಾಗಲು ಇರಬೇಕು ಎಂದು ಅವರು ಬಯಸುತ್ತಾರೆ ಎಂದು ಸಿದ್ದರಾಮಯ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಪತ್ತು, ಅಧಿಕಾರ ತಮ್ಮ ಕೈಯಲ್ಲೇ ಇರಬೇಕು ಎಂಬ ಕಾರಣಕ್ಕೆ ಚತುರ್ವರ್ಣ ವ್ಯವಸ್ಥೆಯನ್ನು ಸ್ಥಾಪಿಸಿ, ಮನುಸ್ಮೃತಿಯನ್ನು ಒಪ್ಪಿಕೊಂಡರು. ಇದಕ್ಕೆ ವಿರುದ್ಧವಾಗಿ ಸಮಾನತೆ, ಸ್ವಾತಂತ್ರ್ಯ, ಸ್ವಾಭಿಮಾನಿ ಬದುಕಿನ ಅವಕಾಶ ನೀಡುವ ಸಂವಿಧಾನವನ್ನು ಬಾಬಾ ಸಾಹೇಬರು ನೀಡಿದರು. ಸಂವಿಧಾನವು ಸಮಾಜದಲ್ಲಿ ಶೋಷಣೆಗೆ ಒಳಗಾದ ಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತದೆ. ಈ ಹಾದಿಯಲ್ಲಿ ಮೀಸಲಾತಿಯೂ ಒಂದು ಭಾಗ. ಹೀಗಾಗಿ ಅವರು ಸಂವಿಧಾನ ವಿರೋಧ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಸಂವಿಧಾನ ಶ್ರೇಷ್ಠ ಅಥವಾ ಕನಿಷ್ಠ ಎಂಬುದು ಯಾವ ವರ್ಗದ ಜನ ಇದನ್ನು ಜಾರಿ ಮಾಡುತ್ತಾರೆ ಎಂಬುದರ ಮೇಲೆ ನಿರ್ಧರಿತವಾಗುತ್ತದೆ ಎಂದು ಬಾಬಾ ಸಾಹೇಬರು ಹೇಳಿದ್ದರು. ಸಂವಿಧಾನದ ಬಗ್ಗೆ ಗೌರವ ಇಲ್ಲದ ಜನ ಅಧಿಕಾರ ಹೊಂದಿದ್ದರೆ, ಸಂವಿಧಾನದ ಧ್ಯೇಯೋದ್ದೇಶಗಳು ಈಡೇರಲು ಸಾಧ್ಯವಿಲ್ಲ, ಸಮಾನತೆ ಸಾಧಿಸಲು ಸಾಧ್ಯವಿಲ್ಲ. ಇದನ್ನು ಶೋಷಿತ ವರ್ಗಗಳ ಜನ ಅರ್ಥಮಾಡಿಕೊಳ್ಳಬೇಕು. ಯಾವಾಗೆಲ್ಲ ಹಿಂದುಳಿದ ಸಮುದಾಯಗಳಿಗೆ, ಮಹಿಳೆಯರಿಗೆ ಮತ್ತು ಶೋಷಿತ ಜನರಿಗೆ ಮೀಸಲಾತಿ ನೀಡುವ ವಿಚಾರ ಬಂದಿದೆ ಆಗೆಲ್ಲ ಅದನ್ನು ವಿರೋಧ ಮಾಡಿದ್ದು ಬಿಜೆಪಿ ಪಕ್ಷ ಎಂಬುದನ್ನು ನಾವು ಮರೆಯಬಾರದು ಎಂದು ಸಿದ್ದರಾಮಯ್ಯ ಹೇಳಿದರು.

ಪದೇ ಪದೇ ಇನ್ನೆಷ್ಟು ವರ್ಷ ಮೀಸಲಾತಿ ಇರಬೇಕು ಎಂದು ಪ್ರಶ್ನಿಸುತ್ತಿದ್ದ ಬಿಜೆಪಿಯವರು, ಈಗ ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಿದ ಮೇಲೆ ಬಾಯಿ ಮುಚ್ಚಿಕೊಂಡಿದ್ದಾರೆ. ಆರ್ಥಿಕ ಸ್ಥಿತಿಯನ್ನು ಆಧರಿಸಿ ಮೀಸಲಾತಿ ನೀಡುವುದಕ್ಕೆ ಸಂವಿಧಾನದಲ್ಲಿ ಅವಕಾಶವೆ ಇಲ್ಲ. ಕೇಂದ್ರ ಸರಕಾರ ತರಾತುರಿಯಲ್ಲಿ ಸಂಸತ್ತಿನಲ್ಲಿ ಮಸೂದೆ ಪಾಸ್ ಮಾಡಿಕೊಂಡು ಜಾರಿಗೆ ತಂದಿದೆ ಎಂದು ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದರು.
ಮೀಸಲಾತಿ ಹೆಚ್ಚಳ ಮಾಡಿದ್ದಾರೆ ಎಂದು ಭಾವಿಸಿಕೊಂಡು ಕೆಲವು ಜನ ಬಸವರಾಜ ಬೊಮ್ಮಾಯಿ ಅವರನ್ನು ಕರೆದು ಸನ್ಮಾನ ಮಾಡಿ ಹೊಗಳಿದ್ದಾರೆ. ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ತಂದಿದ್ದು ರಾಜೀವ್ ಗಾಂಧಿ ಅವರು, ಇದು ಅನುಷ್ಠಾನವಾದದ್ದು ನರಸಿಂಹರಾವ್ ಸರ್ಕಾರದ ಕಾಲದಲ್ಲಿ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮತ್ತು ಹಿಂದುಳಿದವರಿಗೆ ಮೀಸಲಾತಿ ಸಿಕ್ಕಿತು. ಈ ಇತಿಹಾಸವನ್ನು ನಾವು ಮರೆಯಬಾರದು ಎಂದು ಸಿದ್ದರಾಮಯ್ಯ ನುಡಿದರು,

ನಾವು 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದರೆ ಬಿಜೆಪಿಯವರು ಇದನ್ನು ನಂಬಬೇಡಿ, ಅವರಿಂದ 10 ಕೆ.ಜಿ ಕೊಡೋಕಾಗಲ್ಲ ಎನ್ನುತ್ತಾರೆ. ಹಿಂದೆ 7 ಕೆ.ಜಿ ಅಕ್ಕಿ ಕೊಟ್ಟವರಿಗೆ ಈಗ 10 ಕೆ.ಜಿ ಅಕ್ಕಿ ಕೋಡೋಕಾಗಲ್ವಾ? ಇದಕ್ಕೆ ಎರಡು ಮೂರು ಸಾವಿರ ಕೋಟಿ ಹಣ ಹೆಚ್ಚು ಖರ್ಚಾಗಬಹುದು ಅಷ್ಟೆ. ಜನರ ಕಲ್ಯಾಣ ಕಾರ್ಯಕ್ರಮಗಳನ್ನು ಖಂಡಿತಾ ಜಾರಿಗೆ ಕೊಡಲು ಸಾಧ್ಯವಿದೆ. ಅಪಪ್ರಚಾರ ಮಾಡುವವರ ಮಾತಿಗೆ ಬೆಲೆ ಕೊಡದೆ ನಾವು ಎಚ್ಚರಿಕೆಯಿಂದ ಇರಬೇಕು ಎಂದು ಸಿದ್ದರಾಮಯ್ಯ ಇದೇ ವೇಳೆ ಆಗ್ರಹಿಸಿದರು.











