ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ 11 ಮಂದಿ ಅರ್ಜಿ ಸಲ್ಲಿಸಿದ್ದರು. ಎಲ್ಲರ ಅಭಿಪ್ರಾಯ ಪಡೆದು ಮಾವಿನಹಳ್ಳಿ ಸಿದ್ದೇಗೌಡರನ್ನು ಹೈಕಮಾಂಡ್ ಅಂತಿಮವಾಗಿ ಆಯ್ಕೆ ಮಾಡಿತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ನಡೆದ ಬೃಹತ್ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ದೇಗೌಡ ಜೆಡಿಎಸ್ನಿಂದ ಬಂದವರು. ಆದರೆ ಯಾರೂ ಅವರನ್ನು ವಲಸಿಗ ಎಂದು ಪರಿಗಣಿಸಬಾರದು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ನಿಂದ ಈಗಾಗಲೇ ತುಂಬಾ ಜನರು ಕಾಂಗ್ರೆಸ್ ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ ಎಂದು ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಕಳೆದ ಚುನಾವಣೆಯಲ್ಲಿ ಬೇರೆ ಬೇರೆ ರಾಜಕೀಯ ಬೆಳವಣಿಗೆಗಳಿಂದಾಗಿ ಜಿ.ಟಿ ದೇವೇಗೌಡ ಅವರು ನನ್ನನ್ನು ಸೋಲಿಸಿದ್ರು. ಈ ಬಾರಿ ಅಂತಹಾ ಯಾವುದೇ ರಾಜಕೀಯ ಬೆಳವಣಿಗೆಗಳು ಆಗಿಲ್ಲ, ನಾನು 5 ವರ್ಷ ಮುಖ್ಯಮಂತ್ರಿಯಾಗಿ ಸಾಕಷ್ಟು ಒಳ್ಳೆ ಕೆಲಸಗಳನ್ನು ಮಾಡಿದ್ದರೂ ಕೂಡ ಚಾಮುಂಡೇಶ್ವರಿಯ ಜನ ನನ್ನನ್ನು ಸೋಲಿಸಿದ್ರು ಎಂದು ಬೇಸರ ವ್ಯಕ್ತಪಡಿಸಿದ್ರು.

ಕುಮಾರಸ್ವಾಮಿ ಎಷ್ಟೇ ಪಂಚರತ್ನ ಯಾತ್ರೆ ಮಾಡಿದ್ರೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಇನ್ನೊಬ್ಬರ ಹೆಗಲಮೇಲೆ ಕೂತುಕೊಂಡು ಅಧಿಕಾರ ಮಾಡುವುದೇ ಅವರ ಕೆಲಸ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.