ಮುಂಬೈ : ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ಬೇಗೆ ತಾಳಲಾರದೇ 11 ಮಂದಿ ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ಭಾನುವಾರ ಸಂಭವಿಸಿದೆ. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳನ್ನು ವಿಚಾರಿಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಆಸ್ಪತ್ರೆಗೆ ತೆರಳಿದ್ದಾರೆ .

ಮಹಾರಾಷ್ಟ್ರ ಸರ್ಕಾರದ ವತಿಯಿಂದ ನೀಡಲಾಗುವ ಈ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಅಪ್ಪಾ ಸಾಹೇಬ್ ಧರ್ಮಾಧಿಕಾರಿ ಪಡೆದುಕೊಂಡಿದ್ದಾರೆ. ಅಪ್ಪಾ ಸಾಹೇಬ್ರಿಗೆ ಈ ಗೌರವವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರದಾನ ಮಾಡಿದ್ರು. ನವಿ ಮುಂಬೈನಲ್ಲಿ ಈ ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲಾಗಿತ್ತು ಎನ್ನಲಾಗಿದೆ.
ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ನವಿ ಮುಂಬೈನ ಬೃಹತ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಬೆಳಗ್ಗೆ 11:30ಕ್ಕೆ ಆರಂಭಗೊಂಡಿದ್ದ ಸಮಾರಂಭವು ಮಧ್ಯಾಹ್ನ 1 ಗಂಟೆಯವರೆಗೂ ಮುಂದುವರಿದಿತ್ತು.