ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ 2023ರ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಮಧ್ಯೆ ರಾಜ್ಯದಲ್ಲಿ ಪಕ್ಷಾಂತರ ಪರ್ವವೂ ಕೂಡ ಜೋರಾಗಿದ್ದು, ಇಂದು ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾತೆ. ನಿನ್ನೆಯಷ್ಟೇ ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಮತ್ತು ತವಣಪ್ಪ ಅಷ್ಟಗಿ ಮಾತುಕತೆ ನಡೆಸಿದ್ದರು. ಈ ಬೆನ್ನಲ್ಲೇ ಇಂದು ಧಾರವಾಡ ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ತವಣಪ್ಪ ಅಷ್ಟಗಿ ಧಾರವಾಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಅಮೃತ್ ದೇಸಾಯಿ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಇದರಿಂದ ಅಸಮಾಧಾನಗೊಂಡಿದ್ದ ತವಣಪ್ಪ ಅಷ್ಟಗಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಇದೀಗ ಅವರನ್ನು ಕಾಂಗ್ರೆಸ್ ನಾಯಕರು ಮನವೊಲಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಇದರಿಂದ ಬಿಜೆಪಿಗೆ ಹಿನ್ನಡೆಯಾಗಿದೆ. ಇನ್ನೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಕೋರ್ಟ್ ಅನುಮತಿ ನೀಡಿಲ್ಲ. ಇದರಿಂದ ಸಂಕಷ್ಟದಲ್ಲಿ ಅವರಿಗೆ ತವಣಪ್ಪ ಅಷ್ಟಗಿ ಆಗಮನದಿಂದ ಕೊಂಚ ರಿಲೀಫ್ ಆದಂತಾಗಿದೆ.