ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲನ್ನು ಅನುಭವಿಸಿರುವ ಮಾಜಿ ಸಚಿವ ರಮಾನಾಥ ರೈ ಇಂದು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬಂದಿದ್ದರೂ ಸಹ ರಮಾನಾಥ ರೈ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಇಚ್ಛಿಸಿದ್ದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದೆ .

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಚಾರವಾಗಿ ಮಾತನಾಡಿದ ಅವರು, ನನಗೆ ಈಗ ವಯಸ್ಸು 70, ರಾಜಕೀಯವಾಗಿ ಇದು ಅಂತಹ ದೊಡ್ಡ ವಯಸ್ಸಲ್ಲ. ಆದರೂ ನಾನು ನನ್ನ ನಿರ್ಧಾರ ಘೋಷಿಸಿದ್ದೇನೆ, ಇನ್ನು ಉಳಿದಿದ್ದು ಹೈಕಮಾಂಡ್ಗೆ ಬಿಟ್ಟಿದ್ದು ಎಂದಿದ್ದಾರೆ.
ಇನ್ನು ಜಿಲ್ಲೆಯ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿಯೂ ಇದೇ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಜಿಲ್ಲೆಯಲ್ಲಿ ನಮಗೆ ಕೊಂಚ ಹಿನ್ನಡೆ ಉಂಟಾಗಿದೆ. ಇದಕ್ಕಾಗಿ ಕಾರ್ಯಕರ್ತರು ಎದೆಗುಂದುವ ಅಗತ್ಯವಿಲ್ಲ ಎಂದಿದ್ದಾರೆ.






