ಕರ್ನಾಟಕ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಮೊದಲ ದಿನದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಸೇರಿ ನೂತನ ಸಚಿವರು ಹಾಗೂ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇಂದಿನಿಂದ ಬುಧವಾರದವರೆಗೆ (ಮೇ 22ರಿಂದ ಮೇ 24) ವಿಧಾನಸಭೆ ಅಧಿವೇಶನ ನಡೆಯಲಿದ್ದು, ಇಂದು ಬೆಳಗ್ಗೆ 11.15ರ ಹೊತ್ತಿಗೆ ಅಧಿವೇಶನ ಆರಂಭವಾಗಿದೆ. ಮೊದಲ ಎರಡು ದಿನಗಳ ಕಾಲ ಎಲ್ಲ ಶಾಸಕರ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ಮೂರನೇ ದಿನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ.


ಶಾಸಕರಿಗೆ ಪ್ರಮಾಣವಚನ ಬೋಧಿಸುವ ಜವಾಬ್ದಾರಿಯನ್ನು ಹಿರಿಯ ಶಾಸಕ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ವಹಿಸಿಕೊಂಡಿದ್ದಾರೆ. ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ












