ನವದೆಹಲಿ, ಜೂನ್ 21 :ರಾಷ್ಟ್ರಪತಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಗಿದೆ. ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡುವ ಉದ್ದೇಶವಿದೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಲಾಗುವುದು ಎಂದು CM ಸಿದ್ದರಾಮಯ್ಯ ತಿಳಿಸಿದರು.
ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ ಸಿ ಐ ಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್ ಸಿ ಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರಮುಖೇನ ತಿಳಿಸಿದ್ದರು. ಎಫ್ ಸಿಐ ನ ಡೆಪ್ಯೂಟಿ ಮ್ಯಾನೇಜರ್ ನ್ನು ಭೇಟಿಯಾಗಿ ಈ ಬಗ್ಗೆ ಖಚಿತಪಡಿಸಿಕೊಳ್ಳಲಾಗಿತ್ತು. ಆದರೆ ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ ಸಿ ಐ ಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದ್ದು, ನಂತರ ಜೂನ್ 14 ರಂದು ಎಫ್ ಸಿ ಐ ನ ಅಧ್ಯಕ್ಷರು ಪತ್ರ ಬರೆದು , ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು , ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ ಎಂದು ತಿಳಿಸಿದರು.
ಅನ್ನ ಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯಲು ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸ್ಗಡದ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ರಾಜ್ಯಗಳಿಗೆ ಅಕ್ಕಿ ನೀಡುವುದನ್ನು ಸ್ಥಗಿತಗೊಳಿಸಿರುವ ಬಗ್ಗೆ ನೀತಿ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಅಂತರ ಸಚಿವಾಲಯಗಳ ಸಭೆ ನಡೆದಿದೆ ಹಾಗೂ ಮಾಹಿತಿಯ ಕೊರತೆಯಿಂದ ಪತ್ರ ಬರೆದಿದ್ದಾಗಿ ಕೇಂದ್ರ ಸರ್ಕಾರ ಹೇಳಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಎಫ್.ಸಿ.ಐ ಕೇಂದ್ರ ಸರ್ಕಾರದ ಸ್ವಾಮ್ಯ ಸಂಸ್ಥೆಯಾಗಿದ್ದು, ಅಕ್ಕಿ ನೀಡುವುದಾಗಿ ಒಪ್ಪಿ ಪತ್ರ ಬರೆದಿದ್ದಾರೆ ಎಂದರು.