ಮಹಿಳೆಯರಿಗೆ ಈಗಾಗ್ಲೆ 2 ಸಾವಿರ ರೂಪಾಯಿಯ ಗ್ಯಾರಂಟಿ ಯೋಜನಗೆಳನ್ನ ಜಾರಿಗೊಳಿಸಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಮಹಿಳಾ ಸಬಲೀಕರಣ ಮತ್ತು ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಹೆಚ್ಚಿನ ಆದ್ಯತೆಯನ್ನ ನೀಡಿದೆ. ಹೀಗಾಗಿ ಈಗ ಮಹಿಳೆಯರು ತಮ್ಮ ಆರ್ಥಿಕ ಅಸ್ಮಿತೆಯನ್ನ ಕಂಡುಕೊಳ್ಳಲು ಕೂಡ ರಾಜ್ಯ ಸರ್ಕಾರ ನೆರವಾಗಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಈ ಕುರಿತು ಬಜೆಟ್‌ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸರ್ಕಾರದಿಂದ ಬಹಳ ದೊಡ್ಡ ಪಾಲನ್ನ ಅನುದಾನದಲ್ಲಿ ನೀಡಿದೆ. ಇದಕ್ಕೆ ಕಾರ್ಮಿಕ ವರ್ಗದ ಮಹಿಳೆಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ
ಗಂಡು-ಹೆಣ್ಣು, ಮೇಲು-ಕೀಳು ಎಂಬ ತಾರತಮ್ಯ ಸಮಾಜದಲ್ಲಿ ಹಾಸುಹೊಕ್ಕಾಗಿ ಬೆಳೆದಿರುವುದು ಸುಳ್ಳಲ್ಲ. ಶಿಕ್ಷಣ, ಆರ್ಥಿಕ ಸ್ವಾವಲಂಬನೆ ಈ ತಾರತಮ್ಯ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಕುಟುಂಬದ ಯಜಮಾನಿಗೆ
ಎರಡು ಸಾವಿರ ರೂ.ಗಳ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಿ ನಮ್ಮ ಸರ್ಕಾರ ಮಹಿಳೆಯರನ್ನು ನಿಜವಾದ ಅರ್ಥದಲ್ಲಿ ʻಗೃಹಲಕ್ಷ್ಮಿʼಯಾಗಿಸಿದೆ. ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿಯರೂ ಸಹ ಈ ಯೋಜನೆಯ ವ್ಯಾಪ್ತಿಗೆ ಸೇರುತ್ತಾರೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಾಗುತ್ತದೆ. ಬಡತನದಲ್ಲಿ ಗಣನೀಯ ಇಳಿಕೆಯಾಗುತ್ತದೆ. ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕುಟುಂಬಗಳಿಗೆ ತುಸು ನೆಮ್ಮದಿ ಸಿಗುವಂತಾಗುತ್ತದೆ. ಖರೀದಿಸುವ ಸಾಮರ್ಥ್ಯ ಹೆಚ್ಚಾಗುತ್ತದೆ. ಇದರಿಂದ ಆರ್ಥಿಕ ಚಟುವಟಿಕೆ ಮತ್ತು ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ. ಪಶುಪಾಲನೆ, ಗುಡಿ ಕೈಗಾರಿಕೆಯಂತಹ ಜೀವನೋಪಾಯ ಚಟುವಟಿಕೆಗಳಲ್ಲಿ ತೊಡಗಲು ಪ್ರೇರೇಪಿಸುತ್ತದೆ. ಗರ್ಭಿಣಿಯರು, ತಾಯಂದಿರು, ಮಹಿಳಾ ಹಿರಿಯ ನಾಗರಿಕರು ಮತ್ತು ಅನಾರೋಗ್ಯ ಪೀಡಿತ ಮಹಿಳೆಯರು ಕೆಲಸ ಮಾಡುವ ಅನಿವಾರ್ಯತೆಯನ್ನು ನಿವಾರಿಸುತ್ತದೆ.
ಒಟ್ಟಾರೆಯಾಗಿ ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದ ಮಹಿಳೆಯರಿಗೆ ಬದುಕಿನ ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭವಾಗಲಿದ್ದು, ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2,000 ರೂ.ಗಳನ್ನು ವರ್ಗಾಯಿಸಲಾಗುವುದು. ಈ ಯೋಜನೆಗಾಗಿ ವಾರ್ಷಿಕ ಸುಮಾರು 30,000 ಕೋಟಿ ರೂ. ವೆಚ್ಚವಾಗಲಿದ್ದು, ಇದು ಇಡೀ ದೇಶದಲ್ಲಿಯೇ ಅತೀ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಲಿದೆ.
ವಿಶೇಷಚೇತನರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢತೆಯನ್ನು ಒದಗಿಸಲು ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು 4,000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಒದಗಿಸಲಾಗುವುದು. ಇದಲ್ಲದೆ, ನೋಂದಣಿಯಾಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು.
ಮಹಿಳಾ ಉದ್ಯಮಿಗಳು ಆತಿಥ್ಯ, ಆರೈಕೆ ಮತ್ತು ಪ್ರವಾಸೋದ್ಯಮದಂತಹ ಸೇವಾ ವಲಯದಲ್ಲಿ ಹೆಚ್ಚಿನ ಅವಕಾಶ ಪಡೆಯುತ್ತಿದ್ದಾರೆ. ಆದ್ದರಿಂದ, ಸೇವಾ ವಲಯದಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.4 ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿಯನ್ನು ಎರಡು ಕೋಟಿ ರೂ.ಗಳಿಂದ ಐದು ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು.
2023-24ನೇ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಏಳು ಜಿಲ್ಲೆಗಳಲ್ಲಿ NGOಗಳ ಸಹಯೋಗದೊಂದಿಗೆ ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
ರಾಜ್ಯದಲ್ಲಿನ ಆಸಿಡ್ ದಾಳಿ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಇವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಐದು ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಎರಡು ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಎಂದು ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಟ್ಟಾರೆಯಾಗಿ ಇದೀಗ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ 14ನೇ ಐತಿಹಾಸಿಕ ಬಜೆಟ್‌ನಲ್ಲಿ ಮಹಿಳೆಯರ ಶ್ರೆಯೋಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನ ನೀಡಿರೋದಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗುತ್ತಿದೆ.