ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದಲ್ಲಿ ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿ ಅಥಣಿಯಲ್ಲಿ ಶುಕ್ರವಾರ (ಆಗಸ್ಟ್ 11) ನಾನಾ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಬೆಳಗಾವಿಯ ಅಥಣಿಗೆ ಆಗಮಿಸಿದ್ದಾರೆ. ಅವರು ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಸರ್ಕಾರ ಮುನ್ನಡೆಸುತ್ತಿದ್ದು ಬಡವರಿಗಾಗಿ, ರಾಜ್ಯದ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ನುಡಿದಂತೆ ನಡೆಯುತ್ತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಪ್ರಶಂಸಿಸಿದರು.
“ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಎರಡನ್ನೂ ಗೆಲ್ಲಲೇಬೇಕಾಗಿದೆ. ನಿಮ್ಮೆಲ್ಲ ಸಹಕಾರ, ಆಶಿರ್ವಾದ ನಮ್ಮ ಸರ್ಕಾರದ ಮೇಲಿರಲಿ” ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ದಲಿತ ಸಾಹಿತಿ ಅರ್ಜುನ್ ಮೌರ್ಯಗೆ ಅಪಮಾನ, ಕೊಡಗು ವಿಶ್ವವಿದ್ಯಾಲಯದಲ್ಲಿದೆಯೇ ಜಾತಿ ಪದ್ದತಿ?
ಇದೇ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 11.88 ಲಕ್ಷ ಫಲಾನುಭವಿಗಳಿದ್ದು, 9 ಲಕ್ಷ ಮಹಿಳೆಯರು ಈಗಾಗಲೆ ನೋಂದಣಿ ಮಾಡಿಕೊಂಡಿದ್ದಾರೆ. ಈ ವೇದಿಕೆಯನ್ನು ಉಪಯೋಗಿಸಿಕೊಂಡು ತಮಗೆಲ್ಲ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಿದ್ದೇನೆ. ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಲಕ್ಷ್ಮಿ ಹೆಬ್ಬಾಳಕರ್ ಕೋರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಕೆ.ವೆಂಕಟೇಶ್, ಜಿಲ್ಲೆಯ ಶಾಸಕರು, ಇತರ ಗಣ್ಯರು ಇದ್ದರು.