ಹಿಮಾಚಲ ಪ್ರದೇಶ ರಾಜ್ಯದಲ್ಲಿ ಮೇಘಸ್ಫೋಟ ಸಂಭವಿಸಿ, ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ. ಪರಿಣಾಮ ಅವಶೇಷಗಳಡಿಯಲ್ಲಿ ಸಿಲುಕಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ಸೋಮವಾರ (ಆಗಸ್ಟ್ 14) ವರದಿ ಮಾಡಿದೆ.
ಮೇಘಸ್ಫೋಟದಿಂದ ಮಾಬ್ಲಿಘ್ ಗ್ರಾಮದಲ್ಲಿ ಸಿಲುಕಿದ್ದ ಆರು ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿ ಹೋಗಿದ್ದು,. ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.
ಹಿಮಾಚಲ ಪ್ರದೇಶ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಶಿಮ್ಲಾ-ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇಘಸ್ಫೋಟದಿಂದ ಮೃತಪಟ್ಟವರಿಗೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಎಲ್ಲ ರೀತಿಯ ನೆರವು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗಗನಯಾನ ಸಿಬ್ಬಂದಿ ಭೂಮಿಗೆ ಮರಳುವ ಯಶಸ್ವಿ ಪರೀಕ್ಷೆ ನಡೆಸಿದ ಇಸ್ರೊ ; ವಿಡಿಯೊ
ಕಳೆದ 24 ಗಂಟೆಗಳಿಂದ ಹಿಮಾಚಲ ಪ್ರದೇಶ ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ 1,376 ಮನೆಗಳು ಹಾನಿಗೊಂಡಿವೆ. 7,935 ಮನೆಗಳು ಭಾಗಶಃ ಹಾನಿಗೊಂಡಿವೆ. 270 ಮಳಿಗೆಗಳು ಮತ್ತು 2,727 ದನದ ಕೊಟ್ಟಿಗೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.