ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಬುಧವಾರ (ಆಗಸ್ಟ್ 30) ಅನುಷ್ಠಾನಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಾದ್ಯಂತ 1.30 ಕೋಟಿ ಕುಟುಂಬದ ಯಜಮಾನಿಯರು ಇದರ ಫಲಾನುಭವಿಗಳು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ನಾಳಿದ್ದು ಅನುಷ್ಠಾನಗೊಳ್ಳಲಿದೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.
ನಾಲ್ಕು ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರ ಮಾಡಿರುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಮಹಿಳೆಯರು ಈ ಹಣವನ್ನು ವಿವಿಧ ಉದ್ದೇಶಗಳಿಗೆ ಬಳಕೆ ಮಾಡುವುದರಿಂದ ಸರ್ಕಾರಕ್ಕೂ ಆದಾಯ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.