ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಖಾಸಗಿ ಸಾರಿಗೆಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡುವುದು ಸೇರಿದಂತೆ, ಸುಮಾರು 30 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ನಿನ್ನೆ ಮಧ್ಯರಾತ್ರಿ 12 ಗಂಟೆಯಿಂದ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು (ಸೋಮವಾರ) ರಾಜಧಾನಿಯಲ್ಲಿ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ.
ಇಂದು ಆಟೋ, ಕ್ಯಾಬ್ ಗಳ 32ಕ್ಕೂ ಹೆಚ್ಚಿನ ಸಂಘಟನೆಗಳು ಪಾಲ್ಗೊಳ್ಳುತ್ತಿದ್ದು, 7 ಲಕ್ಷಕ್ಕೂ ಹೆಚ್ಚಿನ ವಾಹನಗಳು ಸೇವೆ ಸ್ಥಗಿತಗೊಳಿಸುತ್ತಿವೆ. ಅಲ್ಲದೆ, ಬಂದ್ ಕರೆ ಉಲ್ಲಂಘಿಸಿ ಸೇವೆ ನೀಡಲು ಮುಂದಾಗುವ ಯೆಲ್ಲೋ ಬೋರ್ಡ್ ವಾಹನಗಳನ್ನು ತಡೆಯಲಾಗುವುದು ಎಂದು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಎಚ್ಚರಿಕೆ ನೀಡಿದೆ. ಹೀಗಾಗಿ ಬಂದ್’ಗೆ ಬೆಂಬಲ ನೀಡದಿರುವ ಆಟೋ, ಬಸ್ ಹಾಗೂ ಕ್ಯಾಬ್ ಗಳು ಕೂಡ ಸೋಮವಾರ ರಸ್ತೆಗಿಳಿಯುವುದು ಅನುಮಾನ
ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಮಾಡಲು ಬಿಎಂಟಿಸಿ ಬಸ್ ಗಳ ಕಾರ್ಯಾಚರಣೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಒಂದು ವೇಳೆ ಬಿಎಂಟಿಸ್ ಬಸ್ ಗಳು ಸಾಲದಿದ್ದರೆ, ಕೆಎಸ್ಆರ್’ಟಿಸಿ ಬಸ್ ಗಳನ್ನೂ ಬೆಂಗಳೂರಿನಲ್ಲಿ ಸಾರಿಗೆ ಸೇವೆಗೆ ನೀಡುವ ಬಗ್ಗೆಯೂ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಸುಮಾರು ಏಳು ಲಕ್ಷಕ್ಕೂ ಹೆಚ್ಚು ಖಾಸಗಿ ವಾಹನಗಳು ಕಾರ್ಯನಿರ್ವಹಿಸುತ್ತಿವೆ. 1.6 ಲಕ್ಷಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಲ್ಲಿ ಕ್ಯಾಬ್ಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿಭಟನೆಯಲ್ಲಿ ಒಂದು ಲಕ್ಷ ಏರ್ಪೋರ್ಟ್ ಕ್ಯಾಬ್ಗಳ ಚಾಲಕರು ಪಾಲ್ಗೊಂಡರೂ ಸರ್ಕಾರಕ್ಕೆ ಇದರ ಬಿಸಿ ತಟ್ಟಲಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಅವರು ಹೇಳಿದ್ದಾರೆ.
ಒಟ್ಟಾರೆಯಾಗಿ ಈಗ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಬೃಹತ್ ಪ್ರತಿಭಟನೆಯ ಬಿಸಿ ಮುಟ್ಟಿದ್ದು ಖಾಸಗಿ ಸಾರಿಗೆ ನೌಕರರ ಕೂಗಿಗೆ ಯಾವ ರೀತಿಯಾಗಿ ಸ್ಪಂದಿಸುತ್ತದೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ