ಬೆಂಗಳೂರು,ಅ.04: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ, ನ್ಯಾ. ಅನಿಲ್ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಕ್ಬಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.
ಪ್ರವೀಣ್ ನೆಟ್ಟಾರು ಹತ್ಯೆ
2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು.