ಬೆಂಗಳೂರು: 20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು. ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ (ಗುದ್ದಲಿ ಪೂಜೆ) ನೆರವೇರಿಸಿ ಮಾತನಾಡಿದ ಅವರು “ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಾಜಗಳ ಸಂಘಟನೆಗೆ ಒಂದು ನೆಲೆ ಬೇಕು ಎಂದು ಶಾಸಕ ಅಶೋಕ್ ರೈ ಮನವಿ ಮಾಡಿದ್ದು, ಎಲ್ಲರೂ ಒಟ್ಟಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದು ಹೇಳಿದರು.
ಮನುಷ್ಯನ ಬಳಿ ತೆಗೆದುಕೊಂದು ಹೋಗಲು ಏನೂ ಇಲ್ಲ, ತನ್ನ ಬಳಿ ಇರುವುದನ್ನೆಲ್ಲಾ ಬಿಟ್ಟು ಹೋಗಲೇಬೇಕು. ಆದರೆ ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕರಾದ ಅಶೋಕ್ ರೈ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ ಎಂದರು.
ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್ ಅವರು ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ ಎಂದು ಹೇಳಿದರು.