ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 12ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿ ಸೆಣಸಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ಎರಡೂ ತಂಡಗಳು ಕೂಡ ತಮ್ಮ-ತಮ್ಮ ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆಯವ ಮೂಲಕ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಕಂಡಿವೆ. ಇದೀಗ ಮೂರನೇ ಪಂದ್ಯದಲ್ಲಿಯೂ ಗೆದ್ದು ಹ್ಯಾಟ್ರಿಕ್ ಜಯ ದಾಖಲಿಸಲು ಉಭಯ ತಂಡಗಳ ನಾಯಕರು ಕಣ್ಣಿಟ್ಟಿದ್ದಾರೆ.
ಅನಾರೋಗ್ಯದ ಕಾರಣ ಆರಂಭಿಕ ಎರಡೂ ಪಂದ್ಯಗಳಿಗೆ ಅಲಭ್ಯರಾಗಿದ್ದ ಶುಭಮನ್ ಗಿಲ್, ಇದೀಗ ಪಾಕಿಸ್ತಾನ ವಿರುದ್ದದ ಪಂದ್ಯದ ಮೂಲಕ ಏಕದಿನ ವಿಶ್ವಕಪ್‌ಗೆ ಪದಾರ್ಪಣೆ ಮಾಡಿದ್ದಾರೆ. ಆ ಮೂಲಕ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ ತರಲಾಗಿದೆ. ಇಶಾನ್ ಕಿಶನ್ ಬದಲು ಶಾರ್ದುಲ್ ಠಾಕೂರ್ ಕಣಕ್ಕೆ ಇಳಿದಿದ್ದಾರೆ. ಆದರೆ, ಪಾಕಿಸ್ತಾನ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಇಲ್ಲ.