ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ್ದ ಸಂಸದರು, ಸಿದ್ದರಾಮಯ್ಯ ಅವರು ಅಭದ್ರತೆಯಿಂದ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ 28 ಜನ ಸಂಸದರು ಇದ್ದಾರೆ. ಆದರೆ ಪ್ರತಾಪ್ ಸಿಂಹನ ಮಾತ್ರ ಟಾರ್ಗೆಟ್ ಮಾಡುತ್ತಾರೆ ಏಕೆ?. ನಾನು ಸೋಮಾರಿ ಸಿದ್ದನ ರೀತಿ ಸುಮ್ಮನೆ ಕುಳಿತುಕೊಂಡು ಜಾತಿ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇನೆ. ಹೀಗಾಗಿ ನಾನೇ ಟಾರ್ಗೆಟ್ ಎಂದು ಕಿಡಿಕಾರಿದ್ದರು.

ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ನಿನ್ನೆ ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಕೊನೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂತೆಗೆದುಕೊಂಡರು.