ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮನವಿ ಮಾಡಿದ್ದಾರೆ.
ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕವರು, ಪದವೀಧದರು ಮತ್ತು ಶಿಕ್ಷಕರ ಪರವಾಗಿ ಬಿಜೆಪಿ (BJP) ಸದಾ ನಿಂತಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಕೂಡ ಹಲವಾರು ಸುಧಾರಣೆಗಳನ್ನು ತಂದಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಪದವೀಧರರ ವಿಚಾರ, ಶಿಕ್ಷಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಸಾಕಷ್ಟು ಕೆಲಸ ಮಾಡಿವೆ. ಇವೆರಡು ಪಕ್ಷಗಳು ಶಿಕ್ಷಕರು, ಪದವೀಧರರ ಪರವಾಗಿ ನಿರಂತರವಾಗಿ ಶ್ರಮಿಸುತ್ತಿವೆ ಎಂದರು.
ಶಿಕ್ಷಕರ ಕುರಿತು ಕಾಳಜಿ, ಗೌರವ ನೀಡದೆ ಕಾಂಗ್ರೆಸ್ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷವು ಶಿಕ್ಷಕರ, ಪದವೀಧರರ ವಿರುದ್ಧವಾಗಿ ನೀತಿಗಳನ್ನು ಹೊಂದಿದೆ. ಕಾಂಗ್ರೆಸ್ ಪಕ್ಷದ ಆಡಳಿತ ನೇಮಕಾತಿಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಯಡಿಯೂರಪ್ಪನವರ ಅವಧಿಯಲ್ಲಿ ಹುದ್ದೆ ಭರ್ತಿಗೆ ಅವಕಾಶ ಮಾಡಿಕೊಡಲಾಯಿತು. ಅನುದಾನ ಕೊಡುವ ವಿಚಾರದಲ್ಲೂ ಅವಕಾಶ, ಆಜ್ಞೆ ಮಾಡಲಾಗಿದೆ ಎಂದು ಹೇಳಿದರು.
ಕೌಶಲ್ಯಯುಕ್ತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಹೀಗಾಗಿ ಪ್ರತಿಯೊಬ್ಬರೂ ಮೈತ್ರಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.