ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಗೆದ್ದಿರುವ ಇ. ತುಕಾರಂ(Tukaram) ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಮುನ್ನ ಅವರು ಸಂಡೂರು (Sanduru) ಕ್ಷೇತ್ರದ ಶಾಸಕರಾಗಿದ್ದರು. ನಂತರ ಲೋಕಸಭೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಸತ್ ಸ್ಥಾನ ಉಳಿಸಿಕೊಂಡಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಬೇಕಾಗಿರುವ ಹಿನ್ನೆಲೆಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಂಸದ ತುಕಾರಾಂ ವಿಧಾನಸಭೆ.ಯ ಸ್ಪೀಕರ್ ಇಲ್ಲದ್ದರಿಂದಾಗಿ ಅನುಮತಿ ಪಡೆದು ಕಾರ್ಯದರ್ಶಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ತುಕಾರಂ ಅವರು ಸಂಡೂರು ಕ್ಷೇತ್ರದಿಂದ 2008, 2013, 2018 ಮತ್ತು 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಂತೋಷ್ ಲಾಡ್ ಅವರ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ನಿಷ್ಠೆ ಮೆಚ್ಚಿ ಸಂತೋಷ ಲಾಡ್ 2008 ರಲ್ಲಿ ಮೊದಲ ಬಾರಿಗೆ ಟಿಕೆಟ್ ಕೊಡಿಸಿ ಸಂಡೂರು ಕ್ಷೇತ್ರದಿಂದ ಕಣಕ್ಕಿಳಿಸಿದ್ದರು. ಅಂದಿನಿಂದ ಇಲ್ಲಿಯವರೆಗೂ ಎಲ್ಲಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತುಕಾರಾಂ ಸೋಲಿಲ್ಲದ ಸರದಾರರಾಗಿದ್ದಾರೆ. ಈಗ ಲೋಕಸಭೆ ಚುನಾವಣೆಯಲ್ಲಿ ಕೂಡ ಗೆಲುವು ಸಾಧಿಸಿದ್ದಾರೆ.