ಮೂಡಾ ಹಗರಣದ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ನನ್ನ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದಿದ್ದಾರೆ.

ಈ ಹಿಂದೆ ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ, ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದ ಸಿದ್ದು,ರಾಜ್ಯಪಾಲರನ್ನು ಬಿಜೆಪಿಯವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ ಎಂದಿದ್ದಾರೆ.