
ಮೈಸೂರು: ಕಾಂಗ್ರೆಸ್‌ನಲ್ಲಿ ಮುಂದಿನ ನಾಯಕತ್ವ ಕುರಿತು ನೀಡಿರುವ ಹೇಳಿಕೆ ಬಗ್ಗೆ ನಾನು ಈಗಲೂ ಬದ್ಧನಾಗಿದ್ದೇನೆ. ನಾನು ಹೇಳಿದ್ದರಲ್ಲಿ ತಪ್ಪೇನಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

ಮೈಸೂರಿನಲ್ಲಿ ಮಾತಾಡಿರುವ ಯತೀಂದ್ರ ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ. ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಅನಗತ್ಯವಾಗಿ ಮತ್ತೆ ಅದನ್ನೇ ಮಾತನಾಡಿ ವಿವಾದ ಸೃಷ್ಟಿ ಮಾಡುವುದಿಲ್ಲ. ಮಾಧ್ಯಮದ ಮುಂದೆ ಮತ್ತೆ ಏನೂ ಮಾತನಾಡುವುದಿಲ್ಲ. ಈ ವಿಚಾರದ ಬಗ್ಗೆ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ಒಳಗೆ ಮಾತನಾಡುತ್ತೇನೆ ಎಂದರು.

ಇನ್ನು ನನ್ನ ಹೇಳಿಕೆ ಬಗ್ಗೆ ಪಕ್ಷದಿಂದ ನೋಟಿಸ್ ಬಂದರೆ ಸೂಕ್ತ ಉತ್ತರ ಕೊಡುತ್ತೇನೆ. ಈಗಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ. ಕೇವಲ ಊಹಾಪೋಹ ಅಷ್ಟೇ ಎಂದು ತಮ್ಮ ಮಾತಿಗೆ ಸ್ಪಷ್ಟನೆ ನೀಡಿದ್ದಾರೆ.





