ಬೆಂಗಳೂರು: ಮಕ್ಕಳ ದಿನಾಚರಣೆಯಂದೇ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಗಲಿದೆ. ಈವರೆಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

2002-2003ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಂ ಕೃಷ್ಣ ಅವರ ಅಧಿಕಾರ ಅವಧಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೆ ತರಲಾಗಿತ್ತು. ಮೊದಲು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಈ ಯೋಜನೆ ತರಲಾಗಿತ್ತು. ಬಳಿಕ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೂ ನೀಡಲಾಗಿತ್ತು. ರಾಜ್ಯದಲ್ಲಿ ಸರ್ಕಾರಗಳು ಬದಲಾದಂತೆ ಮಧ್ಯಾಹ್ನದ ಬಿಸಿಯೂಟದಲ್ಲಿ ಕೂಡ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತಾ ಬರುತ್ತಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕೂಡ ನೀಡಲು ಸಿದ್ಧತೆ ನಡೆಸುತ್ತಿದೆ.

ರಾಜ್ಯದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ಕಲಿಯುತ್ತಿದ್ದು, ಗ್ರಾಮೀಣ ಭಾಗದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೆರವಾಗಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ನವೆಂಬರ್ 14 ಮಕ್ಕಳ ದಿನಾಚರಣೆಯಂದೇ ರಾಜ್ಯ ಸರ್ಕಾರ ಈ ಯೋಜನೆಯನ್ನು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.













