ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಸೇರಿದಂತೆ ಇತರ ಸೌಲಭ್ಯಗಳನ್ನು ಪಡೆಯುತ್ತಿರುವ ವಿಡಿಯೋಗಳು ಎಲ್ಲೆಡೆ ವೈರಲ್ ಆದ ಬೆನ್ನಲ್ಲೇ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದೆ ಎಂದು ಆಕ್ರೋಶ ಹೊರಹಾಕಿರುವ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಪ್ರತಿಭಟನೆ ನಡೆಸುತ್ತಾ ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರನ್ನು ಪೊಲೀಸರು ರೇಸ್ ಕೋರ್ಸ್ ರಸ್ತೆ ಬಳಿಯೇ ತಡೆದು ವಶಕ್ಕೆ ಪಡೆದಿದ್ದಾರೆ.

ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಈ ವೇಳೆ ಬ್ಯಾರಿಕೇಡ್ ತಡೆಯಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಹಾಗೂ ಸಿಟಿ ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರತಿಭಟನೆ ಮುಂದುವರಿದಿದೆ.






