ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟ ಬೆನ್ನಲ್ಲೇ ಇದೀಗ ದೇಶದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಜಮ್ಮು ಕಾಶ್ಮೀರದ ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ಆಕಸ್ಮಿಕ ಸ್ಫೋಟ ಸಂಭವಿಸಿದ್ದು, ಇಬ್ಬರು ಅಧಿಕಾರಿಗಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ.

ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಲಾಗಿದ್ದ ಸುಮಾರು 360 ಕಿಗ್ರಾಂನಷ್ಟು ಅಮೋನಿಯಂ ನೈಟ್ರೇಟ್ ವಸ್ತುಗಳನ್ನ ಸೀಲ್ ಮಾಡುವಾಗ ಸ್ಫೋಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಈ ಸ್ಫೋಟದ ಭೀಕರತೆಗೆ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಯ ಸಮೀಪದಲ್ಲಿದ್ದ ವಾಹನಗಳು ಬೆಂಕಿಗೆ ಆಹುತಿಯಾಗಿವೆ.

ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾಗಿದ್ದು, ಮೃತದೇಹಗಳು ಸುಮಾರು 300 ಅಡಿ ದೂರಕ್ಕೆ ಚದುರಿ ಬಿದ್ದಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಂತರ್ರಾಜ್ಯ ಭಯೋತ್ಪಾದನಾ ಘಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಫರಿದಾಬಾದ್ನಲ್ಲಿ ವಶಪಡಿಸಿಕೊಂಡ ಸ್ಫೋಟಕಗಳನ್ನು ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಸದ್ಯ ನಿನ್ನೆ ನಡೆದ ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.












