ಬೆಂಗಳೂರು: ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಚಿವರು ಹಾಗೂ ಶಾಸಕರು ದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಮೂಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಈ ಬಣ ದೆಹಲಿಗೆ ತೆರಳಿದೆ ಎನ್ನುವ ಚರ್ಚೆ ಜೋರಾಗಿದೆ.

ಈ ಬಗ್ಗೆ ಸ್ವತಃ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನನ್ನ ಹತ್ತಿರ ಯಾವ ಬಣನೂ ಇಲ್ಲ. ನಾನು ಯಾವ ಬಣದ ನಾಯಕನೂ ಅಲ್ಲ. ನನಗೆ ಎಲ್ಲಾ ಶಾಸಕರು ಮುಖ್ಯ. ನನಗೆ ಯಾವುದೇ ಗುಂಪು ಮಾಡಲು ಇಷ್ಟ ಇಲ್ಲ. ನಾನು ಗುಂಪು ಮಾಡುವುದು ಇಲ್ಲ ಎಂದಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಲ್ ದಿ ಬೆಸ್ಟ್ ಹೇಳಿರುವ ಡಿ.ಕೆ ಶಿವಕುಮಾರ್, ಅವರ ವಿಚಾರಧಾರೆ ಬಗ್ಗೆ ನಮ್ಮ ಮುಖ್ಯಮಂತ್ರಿಗಳು ಹೇಳಿದ್ದಾರೆ. ಅವರ ಅಭಿಪ್ರಾಯದ ಬಗ್ಗೆ ನಾನೇನೂ ಹೇಳುವುದಿಲ್ಲ. ನಾನುಂಟು..ಹೈಕಮಾಂಡ್ ಉಂಟು. ಮುಖ್ಯಮಂತ್ರಿ ಮತ್ತು ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡುತ್ತೇನೆ ಎಂದಿದ್ದಾರೆ. ಹೀಗಾಗಿ ಸಚಿವಾಕಾಂಕ್ಷಿಗಳು ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಪ್ರತಿಯೊಬ್ಬನಿಗೂ ಮಂತ್ರಿಯಾಗುವ ದೆಹಲಿ ನಾಯಕರನ್ನು ಭೇಟಿ ಮಾಡುವ ಹಕ್ಕಿದೆ. ಹೀಗಾಗಿ ಅವರು ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದರು.











