ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ(Shamanur Shivashankarappa) ನಿನ್ನೆ ಸಂಜೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕರ್ನಾಟಕ ರಾಜಕೀಯದ ಹಿರಿಯ ನಾಯಕನ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ.

ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ನಮ್ಮ ಪಕ್ಷದ ಅತ್ಯಂತ ಹಿರಿಯ ಮುಖಂಡರು. ಶಿಕ್ಷಣ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಬಹಳ ಹೆಸರಾಗಿರುವ ವ್ಯಕ್ತಿ. ವಿಶೇಷವಾಗಿ ದಾವಣಗೆರೆ ಚಿತ್ರಣವನ್ನೇ ಬದಲಾವಣೆ ಮಾಡಿದ ಹಿರಿಮೆ ಅವರಿಗೆ ಸಲ್ಲುತ್ತದೆ. ಸಚಿವರಾಗಿ, ಶಾಸಕರಾಗಿ, ಕಾಂಗ್ರೆಸ್ ಪಕ್ಷದಲ್ಲಿ ಖಜಾಂಚಿಯಾಗಿ ಸೇವೆ ಸಲ್ಲಿಸಿದವರು. ನೇರ ನುಡಿಗಾರ, ಬಹಳ ಚುಟುವಾಗಿ ಎಲ್ಲವನ್ನೂ ವ್ಯಕ್ತಪಡಿಸುವ ವ್ಯಕ್ತಿಯಾಗಿದ್ದರು. ತೃಪ್ತಿಕರ, ಪರಿಪೂರ್ಣ ಜೀವನ ನಡೆಸಿದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಬೆಳಗಾವಿಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ ಪಡೆದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಿರಿಯರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಹಿರಿಯ ಮುತ್ಸದ್ದಿ, ರಾಜಕಾರಣದಲ್ಲಿ ದೀರ್ಘ ಕಾಲದ ಅನುಭವಸ್ಥರು. ಆರು ಬಾರಿ ಶಾಸಕರಾಗಿ, ಸಚಿವರಾಗಿದ್ದರು. ಸಾಮಾಜಿಕ, ಶೈಕ್ಷಣಿಕವಾಗಿ ಬಹಳಷ್ಟು ಸಾಧನೆ ಮಾಡಿದ ಪುಣ್ಯಾತ್ಮರು ಶಾಮನೂರು. 94 ವರ್ಷ ಆದರೂ ಸಹ ರಾಜಕೀಯ ಹಾಗೂ ಸಮಾಜಕ್ಕೆ ಕೊಡುಗೆ ನೀಡಿದ್ದರು. ಶಾಮನೂರು ಶಿವಶಂಕರಪ್ಪ ನಿಧನದಿಂದ ಇಡೀ ರಾಜ್ಯ ಬಡವಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.










