ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೆ(B Nagendra) ಜಾರಿ ನಿರ್ದೇಶನಾಲಯ(ED) ಬಿಗ್ ಶಾಕ್ ನೀಡಿದೆ. ಮಾಜಿ ಸಚಿವ ಬಿ.ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಿದೆ.

ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ರಾಜ್ಯದ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು. ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿದಂತೆ 4 ಸ್ಥಿರಾಸ್ತಿಗೆ ಮುಟ್ಟುಗೋಲು ಹಾಕಲಾಗಿದೆ.

ಪ್ರಕರಣದ ಹಿನ್ನಲೆ ಏನು..?
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್ ಅವರ ಡೆತ್‌ನೋಟ್ ಆಧಾರದ ಮೇಲೆ ವಾಲ್ಮೀಕಿ ಹಗರಣ ಪ್ರಕರಣ ತನಿಖೆ ಆರಂಭವಾಗಿದ್ದು, ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಅಲ್ಲದೇ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ನಾಗೇಂದ್ರ ನಿಗಮದ ಅಧ್ಯಕ್ಷರಾದ, ಶಾಸಕ ಬಸನಗೌಡ ದದ್ದಲ್ ಅವರು ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಿರುವ ಬಗ್ಗೆ ಆರೋಪ ಬಂದಿದೆ. ಈ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಎಸ್‌ಐಟಿ ನಾಗೇಂದ್ರ ಮತ್ತು ದದ್ದಲ್ ಅವರಿಗೆ ಕ್ಲಿನ್ ಚಿಟ್ ನೀಡಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಎಸ್‌ಐಟಿಯನ್ನು ರದ್ದುಗೊಳಿಸಿ ಸಿಬಿಐ ತನಿಖೆಗೆ ಆದೇಶಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಇದೀಗ ಮಾಜಿ ಸಚಿವ ಬಿ.ನಾಗೇಂದ್ರ ಆಸ್ತಿಗೆ ಮುಟ್ಟುಗೋಲು ಹಾಕಿದೆ.



