ಬೆಂಗಳೂರು: ಹೈಕೋರ್ಟ್ ಆದೇಶದ ಜೊತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಬೈರತಿ ಬಸವರಾಜ್‌ಗೆ ಶಾಕ್ ನೀಡಿದೆ. ಇದರಿಂದ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ.

ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಸಿಐಡಿ ಬಂಧನದಿಂದ ಪಾರಾಗಲು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಹೀಗಾಗಿ ಬೈರತಿ ಬಸವರಾಜ್ ಗೆ ಬಂಧನ ಭೀತಿ ಹೆಚ್ಚಾಗಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜುಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿನ್ನೆ ನಿರಾಕರಿಸಿತ್ತು. ಹಾಗೂ ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಸೂಚನೆ ನೀಡಿ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿತ್ತು. ಈ ಬೆನ್ನಲ್ಲೆ ಇಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಬಸವರಾಜ್ ಅರ್ಜಿ ಸಲ್ಲಿಸಿದ್ದರು. ಆದರೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್ ಬೈರತಿ ಬಸವರಾಜ್‌ಗೆ ಮಧ್ಯಂತರ ಜಾಮೀನು ಅರ್ಜಿ ಬಗ್ಗೆ ಆದೇಶಿಸಲು ನಿರಾಕರಿಸಿ ವಿಚಾರಣೆ ಮುಂದೂಡಿದ್ದಾರೆ.

ಇನ್ನೊಂದು ಕಡೆ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ 20ನೇ ಆರೋಪಿಯಾಗಿ ನಿನ್ನೆಯಷ್ಟೇ ಬಂಧನಕ್ಕೆ ಒಳಗಾಗಿದ್ದ ಮಲಯಾಳಿ ಅಜಿತ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಜಿತ್ ವೃತ್ತಿಯಲ್ಲಿ ವಕೀಲನಾಗಿರುವುದರಿಂದ ಬಂಧನಕ್ಕೂ ಮುಂಚೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಸಿ ಪಾಲಿಸಿಲ್ಲವೆಂದು ವಾದ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಹೀಗಾಗಿ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪರಿಗಣಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.



